

ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಸರ್ಕಾರ ತುರ್ತು ನಿರ್ಧಾರ ಕೈಗೊಂಡಿರುವುದನ್ನು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಈ ವಿಷಯ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿದೆ. ಹಾಗಿದ್ದಾಗ ಇಷ್ಟು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದ್ದಾರೆ.
ನ್ಯಾಯಾಂಗದ ಪರಿಶೀಲನೆಯಲ್ಲಿರುವ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿರುವುದು ನ್ಯಾಯಾಂಗ ಪ್ರಕ್ರಿಯೆಗೆ ಮಾಡಿರುವ ಅವಮಾನವಾಗಿದೆ ಎಂದು ಆರೋಪಿಸಿದ್ದಾರೆ.
ಶಾಲೆ ಮತ್ತು ಕಾಲೇಜುಗಳಲ್ಲಿ ಯೂನಿಫಾರ್ಮ್ ವ್ಯವಸ್ಥೆಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಸಮಾನತೆಯನ್ನು ಬೆಳೆಸುವುದಾಗಿದೆ. ಆದರೆ, ಧರ್ಮವನ್ನು ಯೂನಿಫಾರ್ಮ್ ನೀತಿಗೆ ತಂದು ಕಾಂಗ್ರೆಸ್ ಸರ್ಕಾರ ಸಮಾನತೆಯ ಬದಲು ಭೇದಭಾವವನ್ನು ಉತ್ತೇಜಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಒಂದು ಸಮುದಾಯವನ್ನು ತೃಪ್ತಿಪಡಿಸುವ ರಾಜಕೀಯಕ್ಕಾಗಿ ಸರ್ಕಾರ ಸಂಪೂರ್ಣ ಶೈಕ್ಷಣಿಕ ವಾತಾವರಣವನ್ನೇ ಹಾಳು ಮಾಡುತ್ತಿದೆ. ವಿದ್ಯಾರ್ಥಿಗಳ ನಡುವೆ ವಿಭಜನಾ ರಾಜಕಾರಣ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರ ಶಾಲೆಗಳ ಶಿಸ್ತು ಮತ್ತು ಏಕತೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಒತ್ತಾಯಿಸುತ್ತಿರುವ ಸಂದರ್ಭದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಧಾರ್ಮಿಕ ಆಧಾರದ ಮೇಲೆ ಜನರನ್ನು ವಿಭಜಿಸುವ ನೀತಿ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕೇಸರಿ ಶಾಲು ಧರಿಸುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವ ರಾಜ್ಯ ಸರ್ಕಾರದ ನಿರ್ಧಾರಕ್ಕೂ ಜೋಶಿ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇಸರಿ ಶಾಲು ಧಾರ್ಮಿಕ ಸಂಕೇತವಲ್ಲ. ಆದರೂ ವಿದ್ಯಾರ್ಥಿಗಳು ಯಾವ ಬಣ್ಣದ ಬಟ್ಟೆ ಧರಿಸಬೇಕು, ಯಾವುದು ಧರಿಸಬಾರದು ಎಂದು ಸರ್ಕಾರ ನಿರ್ಧರಿಸುವ ಮೂಲಕ ಸರ್ವಾಧಿಕಾರಿ ಧೋರಣೆ ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.
Advertisement