

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಶೀಲನೆ ನಡೆಸುವ ಕುರಿತು ಚಿಂತನೆ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಗೃಹಲಕ್ಷ್ಮಿ ಯೋಜನೆಯಲ್ಲಿ ಮಾತ್ರ ಸುಮಾರು 100 ಕೋಟಿ ರೂ.ದುರ್ಬಳಕೆಯಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಲಾಭ ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳಿಂದ ಅಗತ್ಯ ದಾಖಲೆಗಳನ್ನು ಪಡೆದು ಮರುಪರಿಶೀಲನೆ ನಡೆಸುವ ಕುರಿತು ಸರ್ಕಾರ ಚರ್ಚೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ಅಕ್ರಮಗಳು ಸರ್ಕಾರದ ಗಮನಕ್ಕೆ ಬಂದಿವೆ. ಕೆಲವು ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಹೆಸರಿನಲ್ಲೇ ಹಣ ಜಮೆಯಾಗುತ್ತಿರುವ ಪ್ರಕರಣಗಳು ಪತ್ತೆಯಾಗಿವೆ. ನೋಂದಾಯಿತ ಮೊಬೈಲ್ ಸಂಖ್ಯೆಗಳ ದುರ್ಬಳಕೆ ಮೂಲಕ ಅನರ್ಹ ವ್ಯಕ್ತಿಗಳು ಹಣ ಪಡೆಯುತ್ತಿರುವ ಶಂಕೆ ವ್ಯಕ್ತವಾಗಿದೆ.
ಕೆಲವು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ಹಣ ಜಮೆಯಾಗುತ್ತಲೇ ಇತ್ತು. ಇದರಿಂದ ಸುಮಾರು ರೂ.100 ಕೋಟಿ ತಪ್ಪು ವ್ಯಕ್ತಿಗಳ ಕೈ ಸೇರಿದೆ. ಕೆಲವರು ತಮ್ಮ ಮೊಬೈಲ್ ಸಂಖ್ಯೆಯ ಬದಲು ಇತರರ ಸಂಖ್ಯೆಯನ್ನು ನೀಡಿರುವ ಕಾರಣ ಯೋಜನೆಯ ಲಾಭ ಸರಿಯಾದ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ. ಆದ್ದರಿಂದ ಫಲಾನುಭವಿಗಳ ದಾಖಲೆಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸುವ ಸಲಹೆ ಬಂದಿದೆ. ಪ್ರತಿ ತಾಲ್ಲೂಕಿನ ಮಟ್ಟದಲ್ಲಿ ಈ ಕುರಿತು ವಿಮರ್ಶೆ ನಡೆಯುತ್ತಿದೆ ಎಂದು ಹೇಳಿದರು.
ಯೋಜನೆಗಳ ದುರ್ಬಳಕೆ ತಡೆಯುವುದು ಹಾಗೂ ನಿಜವಾದ ಅರ್ಹರಿಗೆ ಮಾತ್ರ ಸೌಲಭ್ಯ ತಲುಪುವಂತೆ ಮಾಡುವುದು ಸರ್ಕಾರದ ಆದ್ಯತೆಯಾಗಿದೆ. ಗ್ಯಾರಂಟಿ ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಕಳೆದ ಎರಡು ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಅಕ್ಕಿ ವಿತರಣೆ ಆಗದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದರು.
ಅಗತ್ಯ ಪ್ರಮಾಣದ ಅಕ್ಕಿ ಪೂರೈಕೆ ಮತ್ತು ಬಿಡುಗಡೆ ಮಾಡದ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಅವರು ಹೇಳಿದರು.
Advertisement