

ಬೆಂಗಳೂರು: ಅಭಿವೃದ್ಧಿ ಕಾಮಗಾರಿಗಳ ವಿಚಾರವಾಗಿ ಬಿಜೆಪಿ ಶಾಸಕ ಹಾಗೂ ಕೆ.ಆರ್. ಪುರಂ ಕ್ಷೇತ್ರದ ಹಾಲಿ ಶಾಸಕ ಬೈರತಿ ಬಸವರಾಜ್ ಮತ್ತು ಕಾಂಗ್ರೆಸ್‌ನ ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ನಡುವೆ ಸಾರ್ವಜನಿಕರ ಎದುರೇ ಶನಿವಾರ ವಾಗ್ವಾದ ನಡೆದಿದೆ.
ಟಿನ್ ಫ್ಯಾಕ್ಟರಿ ಬಳಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ‘ವಾರ್ಡ್ ಒನ್ ಅಭಿಯಾನ’ದ ಎರಡನೇ ಹಂತಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಸಚಿವರನ್ನು ಸ್ವಾಗತಿಸಲು ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ವಿಳಂಬ ಸೇರಿದಂತೆ ಹಲವು ನಾಗರಿಕ ಸಮಸ್ಯೆಗಳಿಗೆ ಶಾಸಕ ಬೈರತಿ ಬಸವರಾಜ್ ಅವರೇ ಕಾರಣ ಎಂದು ಆರೋಪಿಸಿದರು.
ಇದೇ ವೇಳೆ ಸ್ಥಳದಲ್ಲಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ಶಾಸಕರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.
ಇದರಿಂದ ಆಕ್ರೋಶಗೊಂಡ ಬಸವರಾಜ್ ತಿರುಗೇಟು ನೀಡಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆಯನ್ನು ಅರಿತ ಸಚಿವರು ಮತ್ತು ಪೊಲೀಸರು ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಿದರು.
ಪರಿಸ್ಥಿತಿ ತಿಳಿಯಾದ ಬಳಿಕ ಸಚಿವ ಬೈರೇಗೌಡ ಅವರು ಕೆ.ಆರ್. ಪುರಂ ಟಿನ್ ಫ್ಯಾಕ್ಟರಿ ಜಂಕ್ಷನ್‌ನ ಸಮಗ್ರ ಅಭಿವೃದ್ಧಿಗೆ ವಿಸ್ತೃತ ನೀಲನಕ್ಷೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಾದಚಾರಿಗಳ ಸುರಕ್ಷತೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ನಡುವಿನ ಸುಗಮ ಸಂಪರ್ಕ ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವುದಕ್ಕೆ ಯೋಜನೆಯಲ್ಲಿ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದರು.
ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಟಿನ್ ಫ್ಯಾಕ್ಟರಿ ಜಂಕ್ಷನ್ ಸಮೀಪ ವಾರ್ಡ್ ಒನ್ ಅಭಿಯಾನದ ಎರಡನೇ ಹಂತಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಈ ಸೂಚನೆ ನೀಡಿದರು.
ಸಚಿವರು ಅಧಿಕಾರಿಗಳೊಂದಿಗೆ ಜಂಕ್ಷನ್ ಮತ್ತು ಸುತ್ತಮುತ್ತಲಿನ ರಸ್ತೆಗಳನ್ನು ಪರಿಶೀಲಿಸಿದರು. ನಡೆಯುತ್ತಿರುವ ಮೆಟ್ರೋ ಮತ್ತು ಕೆ-ರೈಡ್ ಕಾಮಗಾರಿಗಳಿಂದ ಉಂಟಾಗಿರುವ ಸಮಸ್ಯೆಗಳು, ಸಂಚಾರ ದಟ್ಟಣೆ ಹಾಗೂ ಪಾದಚಾರಿಗಳಿಗೆ ಅಗತ್ಯ ಮೂಲಸೌಕರ್ಯಗಳ ಕೊರತೆ ಕುರಿತು ಪರಿಶೀಲನೆ ನಡೆಸಿದರು.
ಬೆಂಗಳೂರಿನ ಅತ್ಯಂತ ಜನನಿಬಿಡ ಸಂಚಾರ ಕೇಂದ್ರಗಳಲ್ಲಿ ಒಂದಾಗಿರುವ ಈ ಜಂಕ್ಷನ್‌ನ ಮೂಲಸೌಕರ್ಯ ಮತ್ತು ಸಂಚಾರ ಸಮಸ್ಯೆಗಳಿಗೆ ಸಮಗ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವರು ಹೇಳಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಮೆಟ್ರೋ ಅಧಿಕಾರಿಗಳು ಹಾಗೂ ಇತರ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಜಂಕ್ಷನ್ ಅನ್ನು ಜನಸ್ನೇಹಿ ಮತ್ತು ಪಾದಚಾರಿ ಸ್ನೇಹಿ ಸಾರ್ವಜನಿಕ ಸ್ಥಳವನ್ನಾಗಿ ಅಭಿವೃದ್ಧಿಪಡಿಸುವಂತೆ ಸೂಚಿಸಿದರು.
ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ಈ ಜಂಕ್ಷನ್ ಬಳಸುತ್ತಾರೆ. ಹೀಗಾಗಿ ಅಭಿವೃದ್ಧಿ ಎಂದರೆ ಕೇವಲ ರಸ್ತೆ ಸುಧಾರಣೆಗೆ ಸೀಮಿತವಾಗಬಾರದು. ಆಟೋ, ಟ್ಯಾಕ್ಸಿ ಸೇರಿದಂತೆ ವಿವಿಧ ಸಾರಿಗೆ ವಿಧಾನಗಳಲ್ಲಿ ಬರುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸಮಗ್ರ ಯೋಜನೆ ರೂಪಿಸಬೇಕು ಎಂದು ಹೇಳಿದರು.