

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಹಣಕಾಸು ವಹಿವಾಟು ಮತ್ತು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಕುರಿತು ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿ ಜೆಡಿಎಸ್ ಶಾಸಕರ ನಿಯೋಗ ಬುಧವಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ಸಲ್ಲಿಸಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಶಾಸಕ ಸಿ.ಬಿ. ಸುರೇಶ್ ಬಾಬು, ವಿಧಾನ ಪರಿಷತ್ತಿನ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ. ಶರವಣ ಮತ್ತು ಶಾಸಕ ರಾಜುಗೌಡ ಪಾಟೀಲ್ ಅವರು ನಿಯೋಗದಲ್ಲಿದ್ದರು.
ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಪಾತ್ರ, ಹಣಕಾಸು ವಹಿವಾಟಿನ ಮೂಲ, ಬ್ಯಾಂಕ್ ಖಾತೆಗಳು, ಯುಪಿಐ ಮೂಲಕ ನಡೆದ ವಹಿವಾಟುಗಳು ಮತ್ತು ಇತರ ಹಣಕಾಸು ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ನಿಯೋಗ ಮನವಿಯಲ್ಲಿ ಒತ್ತಾಯಿಸಿದೆ.
ಸಾರ್ವಜನಿಕವಾಗಿ ಬಹಿರಂಗಗೊಂಡಿರುವ ವಾಟ್ಸ್‌ಆ್ಯಪ್ ಸಂಭಾಷಣೆಗಳ ಸತ್ಯಾಸತ್ಯತೆಯನ್ನೂ ಮೂಲ ಮೊಬೈಲ್ ಫೋನ್‌ಗಳು, ಡಿಜಿಟಲ್ ದಾಖಲೆಗಳು ಹಾಗೂ ವಿಧಿವಿಜ್ಞಾನ ಪರೀಕ್ಷೆಯ ಮೂಲಕ ದೃಢಪಡಿಸಬೇಕು ಎಂದು ಆಗ್ರಹಿಸಿದೆ.
ಈ ಪ್ರಕರಣವನ್ನು ಜಿಲ್ಲಾಡಳಿತದ ಆಂತರಿಕ ವಿಚಾರಣೆಗೆ ಮಾತ್ರ ಸೀಮಿತಗೊಳಿಸಬಾರದು. ಲೋಕಾಯುಕ್ತ ಅಥವಾ ಸಮರ್ಥ ಸ್ವತಂತ್ರ ತನಿಖಾ ಸಂಸ್ಥೆಯ ಮೂಲಕ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ನಿಯೋಗ ಮನವಿಯಲ್ಲಿ ತಿಳಿಸಿದೆ.