

ಚಿತ್ರದುರ್ಗ: ಜಿಲ್ಲೆಯ ಗ್ರಾಮವೊಂದರಲ್ಲಿ ಕಳೆದ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸಣ್ಣ ಕಿಟ್ಟದಲ್ ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದರು. ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಚಿರತೆ ಸಂಚರಿಸುತ್ತಿದ್ದ ಸ್ಥಳದಲ್ಲಿ ಬೋನು ಇರಿಸಿ ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಲಾಗಿತ್ತು. ಅಂತಿಮವಾಗಿ ಚಿರತೆ ಬೋನಿಗೆ ಬಿದ್ದಿದ್ದು, ಈ ಮೂಲಕ ಅಧಿಕಾರಿಗಳು ಚಿರತೆ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಈ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯಿಂದಾಗಿ ಗ್ರಾಮಸ್ಥರು ಭಯದ ವಾತಾವರಣದಲ್ಲಿ ದಿನ ಕಳೆಯುವಂತಾಗಿತ್ತು.
ಇದೀಗ ಚಿರತೆ ಬೋನಿನಲ್ಲಿ ಸೆರೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅದನ್ನು ನೋಡಲು ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಸ್ಥಳಕ್ಕೆ ಧಾವಿಸಿದ್ದಾರೆ. ಹಲವರು ಚಿರತೆಯ ದೃಶ್ಯಗಳನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದಾರೆ.