SC/ST ಮೀಸಲಾತಿ ಹೋರಾಟ: ಸುಪ್ರೀಂ ಕೋರ್ಟ್‌ನಲ್ಲಿ ಗೆಲುವು ನಮ್ಮದೇ; ಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಸಚಿವ ಸಂಪುಟ ನಿರ್ಧರಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ.
D.K. Shivakumar
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್Online Desk
Updated on: 

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹಾಗೂ ಒಳಮೀಸಲಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ರಾಜ್ಯಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ತಿಳಿಸಿದ್ದಾರೆ.

ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಸಚಿವ ಸಂಪುಟ ನಿರ್ಧರಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಸಚಿವರಾದ ಎಚ್.ಕೆ. ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ಅವರಿಗೆ ಪ್ರಕರಣದ ಮೇಲ್ವಿಚಾರಣೆ ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಕಾನೂನು ತಂಡದ ಆಯ್ಕೆ ಮತ್ತು ನಿರ್ಧಾರದ ಜವಾಬ್ದಾರಿ ವಹಿಸಲಾಗಿದೆ.

ಹಿಂದಿನ ಸರ್ಕಾರಗಳನ್ನು ದೂಷಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಹಲವು ರಾಜ್ಯಗಳು ಇದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿವೆ. ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿ ಇದೆ. ಈಗಿರುವ ಶೇ.50ರ ಮೀಸಲಾತಿ ಮಿತಿಗಿಂತ ಹೆಚ್ಚುವರಿಯಾಗಿ ಆರು ಶೇಕಡಾವಾರು ಅಂಕಗಳ ಮೀಸಲಾತಿ ಹೆಚ್ಚಳವನ್ನು ನಾವು ಕೋರಿದ್ದೇವೆ ಎಂದು ಹೇಳಿದರು.

ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಾವೇಶಗಳಾದ ‘ಐಕ್ಯತಾ’ ಕಾರ್ಯಕ್ರಮಗಳನ್ನು ಆಯೋಜಿಸಲು ಸರ್ಕಾರ ಯೋಜಿಸಿದೆ. ಈ ಸಮುದಾಯಗಳ ಜನರಿಗೆ ಸರ್ಕಾರ ಅವರ ಕಲ್ಯಾಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.

ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡುವ ಸಮವಸ್ತ್ರಗಳ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡುವ ಸಮವಸ್ತ್ರಗಳಿಗಿಂತ ಉತ್ತಮ ಗುಣಮಟ್ಟದ ಸಮವಸ್ತ್ರಗಳನ್ನು ಒದಗಿಸಬೇಕು. ಇದಕ್ಕಾಗಿ ಹೆಚ್ಚಿನ ಹಣ ಖರ್ಚು ಮಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

D.K. Shivakumar
ಮಹಿಳಾ ಮೀಸಲಾತಿ ಮಸೂದೆ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರ ಚಿಂತನೆ; 15-18 ಮತಗಳ ಅಂತರದಲ್ಲಿ ಗೆಲ್ಲುವ ನಿರೀಕ್ಷೆ!

2026-27ನೇ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿಗಳ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆ (ಟಿಎಸ್‌ಪಿ) ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದ ಕ್ರಿಯಾ ಯೋಜನೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಕರ್ನಾಟಕದ ಮೀಸಲಾತಿ ನೀತಿಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುವುದಾಗಿಯೂ ಮುಖ್ಯಮಂತ್ರಿಗಳು ತಿಳಿಸಿದರು.

ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ಕಳೆದ ವರ್ಷ 42,503 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿತ್ತು. ಈ ವರ್ಷ 34 ಇಲಾಖೆಗಳ ಮೂಲಕ 44,631 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಮುಂಬರುವ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮತ್ತಷ್ಟು ಯೋಜನೆಗಳನ್ನು ಘೋಷಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಸಕರ ಸಭೆಯನ್ನು ಮುಂದಿನ ದಿನಗಳಲ್ಲಿ ಕರೆಯಲಾಗುವುದು. ಮುಂಬರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಈ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಪ್ರಧಾನಿ ಮಧ್ಯಪ್ರವೇಶಕ್ಕೆ ಉಗ್ರಪ್ಪ ಮನವಿ

ಏತನ್ಮಧ್ಯೆ ಕರ್ನಾಟಕದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ಶೇ.56ರಷ್ಟು ಮೀಸಲಾತಿ ನೀತಿಯನ್ನು ರಕ್ಷಿಸುವಂತೆ ಮಾಜಿ ಕಾಂಗ್ರೆಸ್ ಸಂಸದ ವಿ.ಎಸ್. ಉಗ್ರಪ್ಪ ಗುರುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯದ 2023ರ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವಂತೆ ಅವರು ಒತ್ತಾಯಿಸಿದ್ದಾರೆ.

ವಿಧಾನಸೌಧದ ಬಳಿಯ ವಾಲ್ಮೀಕಿ ಪ್ರತಿಮೆ ಎದುರು ಪ್ರಧಾನಿಗೆ ಸಲ್ಲಿಸುವ ಮನವಿ ಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಶುಕ್ರವಾರ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸರ್ವಪಕ್ಷ ನಿಯೋಗದೊಂದಿಗೆ ಅವರನ್ನು ಭೇಟಿಯಾಗಿ ಮೀಸಲಾತಿ ವಿಚಾರಕ್ಕೆ ಸಂವಿಧಾನಾತ್ಮಕ ಪರಿಹಾರ ಕಂಡುಕೊಳ್ಳುವಂತೆ ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಪ್ರವೇಶ ಮತ್ತು ರಾಜ್ಯದ ಅಧೀನ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ) ಕಾಯ್ದೆ-2023 ಅನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಬೇಕು. ಇಲ್ಲವೇ ಈಗಿರುವ ಶೇ.50ರ ಮೀಸಲಾತಿ ಮಿತಿಯನ್ನು ಮೀರಿ ಮೀಸಲಾತಿ ಕಲ್ಪಿಸಲು ಸಂವಿಧಾನದ 15 ಮತ್ತು 16ನೇ ವಿಧಿಗಳಿಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X