ರಾಜ್ಯದ ₹2,186 ಕೋಟಿ ಅನುದಾನ ಬಾಕಿ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಈಶ್ವರ್ ಖಂಡ್ರೆ ಸೂಚನೆ

ಮಂಗಳವಾರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಯಾವುದೇ ವಿಳಂಬ ಮಾಡದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.
Eshwar Khandre directs officials to move SC against Centre
ಸಚಿವ ಈಶ್ವರ್ ಖಂಡ್ರೆ
Updated on: 

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ 2025-26ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದಡಿ ಬರಬೇಕಿರುವ ₹2,186.20 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ, ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ (ಎಸ್‌ಎಲ್‌ಪಿ) ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಹಲವು ಬಾರಿ ಮನವಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ಒದಗಿಸಿದ್ದರೂ ಕೇಂದ್ರದಿಂದ ಅನುದಾನ ಬಿಡುಗಡೆಯಾಗಿಲ್ಲ. ಹೀಗಾಗಿ ಅನುದಾನ ಪಡೆಯಲು ನ್ಯಾಯಾಲಯದ ಮೊರೆ ಹೋಗುವುದೊಂದೇ ಉಳಿದಿರುವ ಮಾರ್ಗ ಎಂದು ಖಂಡ್ರೆ ಹೇಳಿದ್ದಾರೆ.

ಮಂಗಳವಾರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಯಾವುದೇ ವಿಳಂಬ ಮಾಡದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.

Eshwar Khandre directs officials to move SC against Centre
ಕಾಂಗ್ರೆಸ್`ಗೆ ಹೊನ್ನಾಳಿ ಶಾಸಕ ಶಾಕ್; ಶಾಂತನಗೌಡ ರಾಜೀನಾಮೆಗೆ ಮುಂದು!

ಮೂಲಭೂತ ಕೆಲಸಗಳಿಗೂ ಹಣದ ಕೊರತೆ

ಎಲ್ ನಿನೊ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಅನುದಾನದ ಕೊರತೆಯಿಂದ ಗ್ರಾಮ ಪಂಚಾಯಿತಿಗಳು ಸಣ್ಣಪುಟ್ಟ ದುರಸ್ತಿ ಕೆಲಸಗಳನ್ನೂ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು.

ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಅನುದಾನವನ್ನು ಕೇಂದ್ರ ಸರ್ಕಾರ ತಡೆಹಿಡಿಯುವುದು ಸರಿಯಲ್ಲ. ಆದ್ದರಿಂದ ಇನ್ನು ವಿಳಂಬ ಮಾಡದೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಖಂಡ್ರೆ ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಈ ಹಿಂದೆ ಕೂಡ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಿದ್ದ ಅನುದಾನ ಬಿಡುಗಡೆ ಮಾಡದಿದ್ದಾಗ ರಾಜ್ಯ ಸರ್ಕಾರ ನ್ಯಾಯಾಲಯದ ಮೊರೆ ಹೋಗಿತ್ತು. ಈಗಲೂ ಅದೇ ರೀತಿಯ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದರು.

ಪಿಡಿಒಗಳ ಜೇಷ್ಠತಾ ಪಟ್ಟಿ ಪ್ರಕರಣದ ಚರ್ಚೆ

ಇದೇ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಜೇಷ್ಠತಾ ಪಟ್ಟಿ ಕುರಿತಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಹಾಗೂ ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್‌ನಲ್ಲಿ ಬಾಕಿ ಇರುವ ಇಲಾಖೆಯ ಇತರ ಪ್ರಕರಣಗಳ ಬಗ್ಗೆಯೂ ಖಂಡ್ರೆ ಚರ್ಚಿಸಿದರು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕಾರ್ಯದರ್ಶಿ ಡಿ. ರಂದೀಪ್, ಕಾನೂನು ಇಲಾಖೆ ಕಾರ್ಯದರ್ಶಿ ಗೋಪಾಲಕೃಷ್ಣ ರೈ ಹಾಗೂ ಆಯುಕ್ತೆ ಫೌಜಿಯಾ ತರನ್ನುಮ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X