ಪಂಚಾಯತಿ ಚುನಾವಣೆ: ಗ್ರಾಮೀಣ ಮೂಲಸೌಕರ್ಯ ಯೋಜನೆಗಳಿಗೆ 16 ಸಾವಿರ ಕೋಟಿ ರೂ. ವೆಚ್ಚ; ಸರ್ಕಾರ ಆದೇಶ

ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 15,000 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ 10,000 ಕೋಟಿ ರೂಪಾಯಿ ವೆಚ್ಚ ಮಾಡಲಿದೆ.
CM D K Shivakumar
ಸಿಎಂ ಡಿ ಕೆ ಶಿವಕುಮಾರ್
Updated on: 

ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಗ್ರಾಮೀಣ ರಸ್ತೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ 16,000 ಕೋಟಿ ರೂಪಾಯಿ ವೆಚ್ಚ ಮಾಡಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 15,000 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ 10,000 ಕೋಟಿ ರೂಪಾಯಿ ವೆಚ್ಚ ಮಾಡಲಿದೆ.

ಮುಖ್ಯಮಂತ್ರಿಗಳ ಗ್ರಾಮೀಣ ಅಭಿವೃದ್ಧಿ ಯೋಜನೆಯಡಿ ಚರಂಡಿ ಮತ್ತು ರಸ್ತೆ ಸೇರಿದಂತೆ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಗೆ 6,000 ಕೋಟಿ ರೂಪಾಯಿ ವಿನಿಯೋಗಿಸಲಾಗುತ್ತದೆ.

ಸೆಪ್ಟೆಂಬರ್‌ನಲ್ಲಿ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಎರಡೂ ಯೋಜನೆಗಳಿಗೆ ಅನುಮೋದನೆ ನೀಡಲಾಗಿತ್ತು.

CM D K Shivakumar
ಪೊಲೀಸ್ ವಾಹನ ಖರೀದಿಗೆ ಬ್ರೇಕ್? ಬಾಡಿಗೆ, ಲೀಸ್ ಮಾದರಿ ಪರಿಶೀಲನೆಗೆ ಕರ್ನಾಟಕ ಸರ್ಕಾರ ಚಿಂತನೆ!

ನಮ್ಮ ಇಲಾಖೆಯ ಇತಿಹಾಸದಲ್ಲೇ ಇದೇ ಅತಿದೊಡ್ಡ ಅನುದಾನ ಹಂಚಿಕೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಮುಂಬರುವ ಪಂಚಾಯಿತಿ ಚುನಾವಣೆಗೂ, ಈ ಎರಡೂ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಆದೇಶ ಹೊರಡಿಸಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಖಂಡ್ರೆ ಸ್ಪಷ್ಟಪಡಿಸಿದರು.

ನಾವು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಹಾಗಾಗಿ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇದೆ. ಚುನಾವಣೆ ನಡೆಯಲು ಮೂರು ತಿಂಗಳು ಬಾಕಿ ಇರುವಾಗ ನಾವು ಈ ಯೋಜನೆಗಳನ್ನು ಆರಂಭಿಸುತ್ತಿಲ್ಲ ಎಂದು ಹೇಳಿದರು.

CM D K Shivakumar
ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಉನ್ನತ ಶಿಕ್ಷಣ, ಉದ್ಯೋಗದಲ್ಲಿ ಶೇ.7.5 ರಷ್ಟು ಮೀಸಲಾತಿ ಘೋಷಣೆ ಮಾಡಿದ CM ಶಿವಕುಮಾರ್!

2021ರಿಂದ ಬಾಕಿ ಉಳಿದಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು 2027ರ ಜನವರಿಯಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದರು. ಯೋಜನೆಗಳಿಗೆ ಅಗತ್ಯವಿರುವ ಅನುದಾನದ ಲಭ್ಯತೆ ಕುರಿತು ಕೇಳಿದಾಗ, ಹಣಕಾಸು ಇಲಾಖೆಯು ಅನುಮೋದನೆ ನೀಡಿದೆ ಎಂದು ಖಂಡ್ರೆ ಹೇಳಿದರು.

ಎರಡೂ ಯೋಜನೆಗಳಡಿ ಕೈಗೊಳ್ಳುವ ಕಾಮಗಾರಿಗಳಿಗೆ ಟೆಂಡರ್ ಕರೆದು 15 ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ (CMO) ಪ್ರಕಟಣೆಯಲ್ಲಿ ತಿಳಿಸಿದೆ.

ಹಾನಿಗೊಳಗಾದ ಡಾಂಬರು ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಪ್ರಮುಖ ಗ್ರಾಮೀಣ ರಸ್ತೆಗಳಿಗೆ ಮರು ಡಾಂಬರೀಕರಣ ಮಾಡಲು 3,000 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿಯೊಂದು ಕಾಮಗಾರಿಯಲ್ಲೂ ಮೂರು ವರ್ಷಗಳ ನಿರ್ವಹಣೆಯ ಜವಾಬ್ದಾರಿ ಸೇರಿರುತ್ತದೆ. ಇದರಿಂದ ಮಳೆಗಾಲದಲ್ಲೂ ಬಸ್‌ಗಳು, ಟ್ರ್ಯಾಕ್ಟರ್‌ಗಳು ಮತ್ತು ಆಂಬ್ಯುಲೆನ್ಸ್‌ಗಳ ಸಂಚಾರಕ್ಕೆ ಅನುಕೂಲವಾಗುವಂತಹ ಸುಸ್ಥಿರ ರಸ್ತೆಗಳು ನಿರ್ಮಾಣವಾಗಲಿವೆ ಎಂದು ಸಿಎಂಒ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X