

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಯೋಜನೆಗೆ ಮುಂದಾಗಿದೆ.
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ರಾಜ್ಯಾದ್ಯಂತ ಸುಮಾರು 15,000 ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ರೂ.10,000 ಕೋಟಿ ಅನುದಾನ ಮೀಸಲಿಡಲಾಗಿದೆ. ಮುಂದಿನ 15 ತಿಂಗಳೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಸರ್ಕಾರದ ಆದೇಶದ ಪ್ರಕಾರ, ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ತೀವ್ರವಾಗಿ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸುವುದು ಮತ್ತು ಪ್ರಮುಖ ಗ್ರಾಮೀಣ ರಸ್ತೆ ಜಾಲದ ಬಾಳಿಕೆ ಹೆಚ್ಚಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಯೋಜನೆಯನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಈಗಾಗಲೇ ನಿರ್ಮಾಣಗೊಂಡು ಹದಗೆಟ್ಟಿರುವ ಡಾಂಬರು ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ರೂ. 7,000 ಕೋಟಿ ವೆಚ್ಚ ಮಾಡಲಾಗುತ್ತದೆ. ಇನ್ನು ಪ್ರಮುಖ ಗ್ರಾಮೀಣ ರಸ್ತೆಗಳಿಗೆ ಮರು ಡಾಂಬರೀಕರಣ ಮಾಡುವ ಮೂಲಕ ಅವುಗಳ ಬಾಳಿಕೆ ಅವಧಿ ಹೆಚ್ಚಿಸಲು ರೂ.3,000 ಕೋಟಿ ಮೀಸಲಿಡಲಾಗಿದೆ.
ಒಟ್ಟು ಅನುದಾನದಲ್ಲಿ ಈಗಾಗಲೇ ಜಿಲ್ಲೆಗಳಿಗೆ ರೂ.7,775 ಕೋಟಿ ಹಂಚಿಕೆ ಮಾಡಲಾಗಿದೆ. ವಿಶೇಷ ಆದ್ಯತೆ ಅಗತ್ಯವಿರುವ ಪ್ರದೇಶಗಳ ಕಾಮಗಾರಿಗಳಿಗಾಗಿ ರೂ.2,225 ಕೋಟಿ ಕಾಯ್ದಿರಿಸಲಾಗಿದೆ.
ಜಿಲ್ಲಾವಾರು ಅನುದಾನ ಹಂಚಿಕೆಯಲ್ಲಿ ಬೆಳಗಾವಿ ಜಿಲ್ಲೆಗೆ ಅತಿ ಹೆಚ್ಚು ರೂ.650 ಕೋಟಿ ನೀಡಲಾಗಿದೆ. ತುಮಕೂರು ಜಿಲ್ಲೆಗೆ ರೂ.425 ಕೋಟಿ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಿಗೆ ತಲಾ ರೂ.350 ಕೋಟಿ, ದಾವಣಗೆರೆ ಮತ್ತು ಮಂಡ್ಯ ಜಿಲ್ಲೆಗಳಿಗೆ ತಲಾ ರೂ.325 ಕೋಟಿ ಹಾಗೂ ಬೆಂಗಳೂರು ನಗರ ಜಿಲ್ಲೆಗೆ ರೂ.200 ಕೋಟಿ ಅನುದಾನ ನಿಗದಿಪಡಿಸಲಾಗಿದೆ.
ಯೋಜನೆಯಡಿ ಯಾವುದೇ ವಿಧಾನಸಭಾ ಕ್ಷೇತ್ರಕ್ಕೆ ನಿಗದಿತ ಅನುದಾನ ಅಥವಾ ರಸ್ತೆ ಉದ್ದದ ಪಾಲಿನಲ್ಲಿ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಆಯಾ ಕ್ಷೇತ್ರಗಳ ಶಾಸಕರ ಒಪ್ಪಿಗೆ ಪಡೆದು ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
ರಸ್ತೆಗಳ ಆಯ್ಕೆಯಲ್ಲಿ ಜನಸಂಖ್ಯೆ, ಕೃಷಿ ಚಟುವಟಿಕೆಗಳು ಹಾಗೂ ಮಾರುಕಟ್ಟೆ, ಶಾಲೆ, ಆಸ್ಪತ್ರೆ ಮತ್ತು ಸಾರಿಗೆ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಅಗತ್ಯವನ್ನು ಪರಿಗಣಿಸಲಾಗುತ್ತದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ-1 ಮತ್ತು 2 ಸೇರಿದಂತೆ ಇತರ ಸರ್ಕಾರಿ ಯೋಜನೆಗಳಡಿ ನಿರ್ಮಾಣಗೊಂಡು ನಿಗದಿತ ಬಾಳಿಕೆ ಅವಧಿ ಮುಗಿದಿರುವ ಹಾಗೂ ಕಳಪೆ ಸ್ಥಿತಿಯಲ್ಲಿರುವ ರಸ್ತೆಗಳನ್ನು ಕೂಡ ಪರಿಗಣಿಸಲಾಗುತ್ತದೆ. ಆದರೆ, ಇವು ಜಿಲ್ಲಾ ಗ್ರಾಮೀಣ ರಸ್ತೆ ಯೋಜನೆ (ಡಿಆರ್‌ಆರ್‌ಪಿ) ಪಟ್ಟಿಯಲ್ಲಿ ಸೇರಿರಬೇಕು.
ನ್ಯಾಯಾಲಯಗಳು, ಲೋಕಾಯುಕ್ತ ಹಾಗೂ ವಿಧಾನಮಂಡಲದ ವಿವಿಧ ಸಮಿತಿಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ರಸ್ತೆ ಮತ್ತು ಸೇತುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಸರ್ಕಾರ ಸೂಚಿಸಿದೆ. ಇದರಲ್ಲಿ ಅರ್ಜಿ ಸಮಿತಿ ಮತ್ತು ಭರವಸೆಗಳ ಸಮಿತಿಯ ಮುಂದೆ ಬಾಕಿ ಇರುವ ವಿಚಾರಗಳೂ ಸೇರಿವೆ.
ಎಲ್ಲ ಕಾಮಗಾರಿಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ ಮತ್ತು ನಿಯಮಗಳ ಅಡಿಯಲ್ಲಿ ಪಾರದರ್ಶಕ ಟೆಂಡರ್ ಪ್ರಕ್ರಿಯೆ ಮೂಲಕ ಕೈಗೆತ್ತಿಕೊಳ್ಳಬೇಕು ಎಂದು ಸರ್ಕಾರ ನಿರ್ದೇಶಿಸಿದೆ.
ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಮತ್ತು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಗಳ ಮೂಲಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ.
15 ತಿಂಗಳ ಗಡುವು
ಕ್ರಿಯಾ ಯೋಜನೆಗೆ ಅನುಮೋದನೆ ದೊರೆತ ದಿನದಿಂದ 15 ತಿಂಗಳೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಗುತ್ತಿಗೆದಾರರಿಗೆ ಕಡ್ಡಾಯವಾಗಿದೆ. ಪ್ರತಿಯೊಂದು ಕಾಮಗಾರಿಗೂ ಮೂರು ವರ್ಷಗಳ ನಿರ್ವಹಣಾ ಅವಧಿಯನ್ನು ನಿಗದಿಪಡಿಸಲಾಗಿದೆ.
ರಸ್ತೆ ಕಾಮಗಾರಿಗಳ ಗುಣಮಟ್ಟ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾಮಗಾರಿ ಆರಂಭಿಸುವ ಮೊದಲು ಮತ್ತು ಪೂರ್ಣಗೊಂಡ ನಂತರ ಜಿಪಿಎಸ್ ಗುರುತಿನೊಂದಿಗೆ ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ದಾಖಲಿಸಿ ಎನ್‌ಜಿಎಸ್‌ಕೆ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡಬೇಕು. ಪ್ರತಿಯೊಂದು ರಸ್ತೆಯನ್ನೂ ಮೂರು ಬಾರಿ ಪರಿಶೀಲನೆಗೆ ಒಳಪಡಿಸಲಾಗುತ್ತದೆ.
ಐದು ಕಿ.ಮೀ.ಗಿಂತ ಹೆಚ್ಚು ಉದ್ದದ ಎಲ್ಲ ರಸ್ತೆಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸರ್ಕಾರ ಸೂಚಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಾನೂನುಬದ್ಧವಾಗಿ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆಯೂ ನಿರ್ದೇಶನ ನೀಡಲಾಗಿದೆ.
ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಸುಧಾರಿಸುವುದರ ಜತೆಗೆ ಕೃಷಿ ಉತ್ಪನ್ನಗಳ ಸಾಗಣೆ, ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ನಿರೀಕ್ಷೆಯಿದೆ.