

ಬೀದರ್: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (BRIMS) ಆಸ್ಪತ್ರೆಯ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ರಾಜ್ಕುಮಾರ್ ಶಿವಕುಮಾರ್ ಮಳಗೆ ಅವರಿಗೆ ಸಂಬಂಧಿಸಿದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಇಂದು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೀದರ್ ನಗರದ ಅವರ ನಿವಾಸ, ಕಾಲೇಜು, ಕಚೇರಿ ಹಾಗೂ ಶೆಡ್ ಸೇರಿದಂತೆ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.
ಗುರುನಗರದಲ್ಲಿರುವ ಅವರ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳು ಮತ್ತು ವಾಹನಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ ಆಸ್ತಿಗೆ ಸಂಬಂಧಿಸಿದ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ.