ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯಾದ್ಯಂತ 7 ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಕಚೇರಿ-ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ; Video

ಧಾರವಾಡ, ಚಿತ್ರದುರ್ಗ, ಬಾಗಲಕೋಟೆ, ಹಾಸನ, ಮೈಸೂರು, ಚಾಮರಾಜನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Lokayukta police raid
ಲೋಕಾಯುಕ್ತ ಪೊಲೀಸರ ದಾಳಿ
Updated on: 

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ ಏಳು ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಇಂದು ಬುಧವಾರ ಬೆಳಗ್ಗೆಯಿಂದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಧಾರವಾಡ, ಚಿತ್ರದುರ್ಗ, ಬಾಗಲಕೋಟೆ, ಹಾಸನ, ಮೈಸೂರು, ಚಾಮರಾಜನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರವಾಡದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಚಾಲಕ ಹಾಗೂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಶಡಕ್ಷರಯ್ಯ, ಚಿತ್ರದುರ್ಗದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ನಿರೀಕ್ಷಕ ಎಸ್.ಟಿ. ವೆಂಕಟೇಶಪ್ಪ ಅವರ ನಿವಾಸ ಹಾಗೂ ಇತರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಜಮಖಂಡಿಯ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಸಂಜೀವಪ್ಪ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ತಂಡ ಶೋಧ ನಡೆಸಿದೆ.

ಹಾಸನ ಜಿಲ್ಲೆಯಲ್ಲಿ ಸಕಲೇಶಪುರದ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಮೈಸೂರು-ಚಾಮರಾಜನಗರ ಭಾಗದಲ್ಲಿ ಮೊಬೈಲ್ ಸ್ಕ್ವಾಡ್‌ಗೆ ನಿಯೋಜಿತರಾಗಿರುವ ವಲಯ ಅರಣ್ಯಾಧಿಕಾರಿ ಸುರೇಂದ್ರ ಕುಮಾರ್ ಅವರೂ ದಾಳಿಗೆ ಒಳಗಾದವರಲ್ಲಿ ಸೇರಿದ್ದಾರೆ.

ದಾಳಿ ವೇಳೆ ಪತ್ತೆಯಾದ ಆಸ್ತಿ ವಿವರಗಳು ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಚಿತ್ರದುರ್ಗ ಜಿಲ್ಲಾ ಸರ್ಜನ್ ಡಾ. ರವೀಂದ್ರ ನಿವಾಸ ಮೇಲೆ ದಾಳಿ

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆ ಇನ್ಸ್‌ಪೆಕ್ಟರ್ ವೆಂಕಟೇಶ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ಮತ್ತು ಡಿವೈಎಸ್‌ಪಿ ಕಲಾವತಿ ನೇತೃತ್ವದ ತಂಡ ದಾಳಿ ನಡೆಸಿದೆ.

ಚಿತ್ರದುರ್ಗದ ಚಳ್ಳಕೆರೆ ರಸ್ತೆಯಲ್ಲಿರುವ ಡಾ. ರವೀಂದ್ರ ಅವರ ‘ಪ್ರಸಾದ’ ನಿವಾಸ ಹಾಗೂ ಅವರಿಗೆ ಸೇರಿದ ಅಕ್ಷಯ ಗ್ಲೋಬಲ್ ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ. ಮತ್ತೊಂದೆಡೆ, ವಿದ್ಯಾನಗರದಲ್ಲಿರುವ ಇನ್ಸ್‌ಪೆಕ್ಟರ್ ವೆಂಕಟೇಶ್ ಮನೆ ಹಾಗೂ ಅವರಿಗೆ ಸೇರಿದ ‘ಮಹಾಲಕ್ಷ್ಮಿ’ ನಿವಾಸದ ಮೇಲೂ ದಾಳಿ ನಡೆದಿದೆ.

ಬ್ರಿಮ್ಸ್ ನರ್ಸಿಂಗ್ ಕಾಲೇಜು ಪ್ರಿನ್ಸಿಪಾಲ್ ಮನೆ, ಕಚೇರಿ ಮೇಲೆ ದಾಳಿ

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (BRIMS) ನರ್ಸಿಂಗ್ ಕಾಲೇಜು ಪ್ರಾಂಶುಪಾಲ ರಾಜಕುಮಾರ್ ಮಾಳಗೆ ಅವರಿಗೆ ಸೇರಿದ ಬೀದರ್ ನಗರದ ಗುರುನಗರದ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಹನುಮಂತರಾಯ ಅವರ ತಂಡ ದಾಳಿ ನಡೆಸಿ ಆಸ್ತಿಪಾಸ್ತಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಸರ್ಕಾರಿ ಬಸ್ ಚಾಲಕ, ನಿರ್ವಾಹಕ ನಿವಾಸಕ್ಕೆ ಲೋಕಾಯುಕ್ತ ದಾಳಿ

ನಿಗದಿತ ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಆರೋಪದಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್ ಚಾಲಕ ಕಂ ನಿರ್ವಾಹಕ ಷಡಕ್ಷರಯ್ಯ ಅವರ ಹುಬ್ಬಳ್ಳಿಯ ಗಾಂಧಿನಗರದ ನಿವಾಸದ ಮೇಲೆ ದಾಳಿ ನಡೆದಿದೆ. ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X