

ಮೈಸೂರು: ಮೈಸೂರಿನಲ್ಲಿ ಆಪ್ತರ ನಡುವಿನ ಮುನಿಸು ಮುಂದುವರಿದಂತೆ ಕಾಣುತ್ತಿದ್ದು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಪೂರ್ವಭಾವಿ ಸಭೆಗೆ ಅವರ ಪರಮಾಪ್ತ ಡಾ. ಹೆಚ್.ಸಿ. ಮಹದೇವಪ್ಪ ಅವರು ಗೈರಾಗುವ ಮೂಲಕ ಮತ್ತೊಮ್ಮೆ ಅಂತರ ಕಾಯ್ದುಕೊಂಡಿದ್ದಾರೆ.
ನವೆಂಬರ್ 26ರಂದು ಮೈಸೂರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್ ನಾಯಕರ ಸಭೆ ಆಯೋಜಿಸಲಾಗಿತ್ತು.
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ, ಎನ್. ಚೆಲುವರಾಯಸ್ವಾಮಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಕೆ.ಎಂ. ಶಿವಲಿಂಗೇಗೌಡ, ಗಣಿಗ ರವಿ, ರಮೇಶ್ ಬಂಡಿಸಿಡ್ಡೆಗೌಡ, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ, ಶಿವಕುಮಾರ್ ಸೇರಿದಂತೆ ಹಲವು ಸ್ಥಳೀಯ ಕಾಂಗ್ರೆಸ್ ಮುಖಂಡರು ಭಾಗವಹಿಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಜಿಲ್ಲೆಯವರೇ ಆದ, ಶಾಸಕರಾದ ಡಾ.ಎಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್, ಕೆ.ವೆಂಕಟೇಶ್ ಮೊದಲಾದ ನಾಯಕರು ಪಾಲ್ಗೊಂಡಿಲ್ಲದಿರುವುದು ಚರ್ಚೆಗೆ ಗ್ರಾಸವಾಗಿದೆ. ದಲಿತ ನಾಯಕ ಮಹದೇವಪ್ಪ ಅವರು ಸಿದ್ದರಾಮಯ್ಯ ಅವರೊಂದಿಗೆ ಮತ್ತೆ ಅಂತರ ಕಾಯ್ದುಕೊಂಡಿರುವುದು ಕಂಡುಬಂತು.
‘ಸಂವಿಧಾನ ರಕ್ಷಣೆಯ ಜಾಗೃತಿ ಕಾರ್ಯಕ್ರಮ ಇದಾಗಿರುವುದರಿಂದ ನಮ್ಮೆಲ್ಲ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರು ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಹೆಚ್ಚಿನ ಜನರು ಭಾಗವಹಿಸುವಂತೆ ಮಾಡಬೇಕು ಎಂದು ಸಿದ್ದರಾಮಯ್ಯ ನಿರ್ದೇಶಿಸಿದರು’ ಎಂದು ತಿಳಿದು ಬಂದಿದೆ.