ಬಡವರಿಗೆ ಸ್ವಂತ ನಿವೇಶನ: ಡಿಸೆಂಬರ್ - ಜನವರಿಗೆ ಮೊದಲ ಹಂತದಲ್ಲಿ 5 ಲಕ್ಷ ಸೈಟು ಹಂಚಿಕೆ- ಡಿಸಿಎಂ ಡಾ. ಜಿ. ಪರಮೇಶ್ವರ್‌

ಬಡವರಿಗೆ ಸ್ವಂತ ನಿವೇಶನ ಒದಗಿಸುವ ಉದ್ದೇಶದಿಂದ ರೂಪಿಸಿರುವ 15 ಲಕ್ಷ ನಿವೇಶನಗಳ ಯೋಜನೆಯನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಪರಮೇಶ್ವರ್ ತಿಳಿಸಿದರು.
DCM Dr.G.Parameshwar
ಡಿಸಿಎಂ ಡಾ.ಜಿ. ಪರಮೇಶ್ವರ್
Updated on: 

ಬೆಂಗಳೂರು: ರಾಜ್ಯದ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ರೂಪಿಸಿರುವ ಯೋಜನೆಯಡಿ ಡಿಸೆಂಬರ್‌–ಜನವರಿಯಲ್ಲಿ ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳನ್ನ ಹಂಚಿಕೆ (Site Allotment) ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಡಿಸಿ ಮತ್ತು ಎಸಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಸ್ವಂತ ನಿವೇಶನ ಒದಗಿಸುವ ಉದ್ದೇಶದಿಂದ ರೂಪಿಸಿರುವ 15 ಲಕ್ಷ ನಿವೇಶನಗಳ ಯೋಜನೆಯನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಬೇಕು. ಈಗಾಗಲೇ ಸುಮಾರು 24 ಸಾವಿರ ಎಕರೆ ಸರ್ಕಾರಿ ಜಮೀನನ್ನು ಗುರುತಿಸಲಾಗಿದ್ದು, ಅರ್ಹ ಫಲಾನುಭವಿಗಳನ್ನು ಗುರುತಿಸುವುದು ಹಾಗೂ ನಿವೇಶನಗಳ ಅಭಿವೃದ್ಧಿ ಮತ್ತು ಹಂಚಿಕೆ ಪ್ರಕ್ರಿಯೆಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

ಅದೇ ರೀತಿ, ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು. ಪಿಂಚಣಿಗೆ ಅರ್ಹರಾದವರು ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸೌಲಭ್ಯ ದೊರೆಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪರಿಹಾರ ವಿತರಣೆಯಲ್ಲಿ ಯಾವುದೇ ವಿಳಂಬವಾಗಬಾರದು. ಅರ್ಹ ಪ್ರತಿ ರೈತರಿಗೆ ಸರ್ಕಾರ ಘೋಷಿಸಿರುವ ₹5,000 ಬರ ಪರಿಹಾರವನ್ನು ತ್ವರಿತವಾಗಿ ಅವರ ಖಾತೆಗಳಿಗೆ ಜಮೆ ಮಾಡಬೇಕು. ಪರಿಹಾರ ವಿತರಣೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳು ಕೂಡಲೇ ಕ್ರಮ ಕೈಗೊಂಡು, ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಹೇಳಿದರು.

ಬರ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ರೈತರಿಗೆ ಮೇವಿನ ಬೀಜದ ಕಿಟ್‌ಗಳ ವಿತರಣೆಗೆ ಆದ್ಯತೆ ನೀಡಬೇಕು. ಈ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ ₹30 ಕೋಟಿ ಅನುದಾನ ಕೋರಿ ಸಲ್ಲಿಕೆಯಾಗಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

DCM Dr.G.Parameshwar
Watch | ಬಡವರಿಗೆ 5 ಲಕ್ಷ ಸೈಟ್ ವಿತರಣೆ: ಡಿಕೆಶಿ ಸರ್ಕಾರ ಸಹಿ

ಸರ್ಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನದಲ್ಲಿಯೂ ಪಾರದರ್ಶಕತೆ, ವೇಗ ಮತ್ತು ಹೊಣೆಗಾರಿಕೆ ಇರಬೇಕು. ಅಧಿಕಾರಿಗಳು ಕೇವಲ ಪ್ರಗತಿ ವರದಿಗಳನ್ನು ಸಲ್ಲಿಸುವುದಕ್ಕೆ ಸೀಮಿತವಾಗದೆ, ಜನರಿಗೆ ಯೋಜನೆಗಳ ನೈಜ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸುವ ಮೂಲಕ ಆಡಳಿತ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X