ಬೆಲೆ ಏರಿಕೆ, ಬರಗಾಲ, ಹಗರಣಗಳ ಅಸ್ತ್ರ: ಬೆಳಗಾವಿಯಲ್ಲಿ BJP ಶಕ್ತಿ ಪ್ರದರ್ಶನ; ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು..!

ಪಕ್ಷದ ಜಿಲ್ಲಾ ಘಟಕಗಳ ಪರವಾಗಿ ಸಲ್ಲಿಸಿದ ಮನವಿಯಲ್ಲಿ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.
Belagavi protest
ಬೆಳಗಾವಿ ಪ್ರತಿಭಟನೆ
Updated on: 

ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದ್ದು, ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬೆಳಗಾವಿ ಜಿಲ್ಲಾ ಬಿಜೆಪಿ ಘಟಕ ಗುರುವಾರ ಪ್ರತಿಭಟನೆ ನಡೆಸಿತು.

ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು, ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಆಡಳಿತದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಘಟಕಗಳ ಪರವಾಗಿ ಸಲ್ಲಿಸಿದ ಮನವಿಯಲ್ಲಿ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.

ಹಾಲಿನ ಬೆಲೆ ಹೆಚ್ಚಳ ಮಾಡುವ ಮೂಲಕ ಗ್ರಾಹಕರ ಮೇಲೆ ಹೊರೆ ಹಾಕಿರುವ ಸರ್ಕಾರ, ಹಾಲು ಉತ್ಪಾದಕರಿಗೆ ಅದರ ಸಂಪೂರ್ಣ ಲಾಭವನ್ನು ತಲುಪಿಸಿಲ್ಲ ಎಂದು ಬಿಜೆಪಿ ಟೀಕಿಸಿದೆ.

ಇದೇ ವೇಳೆ ಹಲವು ಸಾರ್ವಜನಿಕ ಸೇವೆಗಳ ಶುಲ್ಕ ಹಾಗೂ ಬಸ್ ಪ್ರಯಾಣ ದರವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಆರೋಪಿಸಿದೆ. ಒಂದು ಕೈಯಲ್ಲಿ ಉಚಿತ ಬಸ್ ಪ್ರಯಾಣದ ಸೌಲಭ್ಯ ನೀಡಿ, ಮತ್ತೊಂದು ಕೈಯಲ್ಲಿ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರ ಮೇಲೆ ಹೊರೆ ಹಾಕಲಾಗುತ್ತಿದೆ ಎಂದು ದೂರಿದೆ.

ಸಾಕಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯದ 150ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾಗಿದೆ. ಇದರಿಂದ ರೈತರು ತೀವ್ರ ಮೇವಿನ ಕೊರತೆ ಎದುರಿಸುತ್ತಿದ್ದಾರೆ. ಆದರೆ, ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿಲ್ಲ. ಸಂಕಷ್ಟದಲ್ಲಿರುವ ಜನರಿಗೆ ಕನಿಷ್ಠ ಭರವಸೆಯನ್ನೂ ನೀಡಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಒದಗಿಸುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

Belagavi protest
'ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಿ ಸೌಲಭ್ಯ ಬೇಡ': ಸ್ವಂತ ಖರ್ಚಿನಲ್ಲೇ ಭಾಗವಹಿಸುವುದಾಗಿ ಶಾಸಕ ಶರಣಗೌಡ ಕಂದಕೂರು ಪತ್ರ

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ನೀಡಿದ್ದ ಭರವಸೆಗಳು ಬಹುತೇಕ ಭಾಷಣ ಮತ್ತು ಘೋಷಣೆಗಳಿಗೆ ಸೀಮಿತವಾಗಿವೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸಂಬಂಧಿಸಿದ ಹಗರಣಗಳನ್ನೂ ಬಿಜೆಪಿ ಪ್ರಸ್ತಾಪಿಸಿದೆ.

ಹಿಂದಿನ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಇದೀಗ ಗುತ್ತಿಗೆದಾರರಿಂದಲೇ ಕಮಿಷನ್ ರೂಪದ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದೆ ಎಂದು ಪಕ್ಷ ದೂರಿದೆ.

ಜನರ ಕಲ್ಯಾಣವನ್ನು ನಿರ್ಲಕ್ಷಿಸಿ ರಾಜ್ಯದ ಬೊಕ್ಕಸ ಹಾಗೂ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುತ್ತಿರುವ ಸರ್ಕಾರದ ವಿರುದ್ಧ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ಮನವಿ ಮಾಡಿದೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದೂ ಬಿಜೆಪಿ ಆರೋಪಿಸಿದೆ.

ಒಳನುಸುಳುಕೋರರಿಗೆ ಬೆಂಬಲ ನೀಡುವ ಮೂಲಕ ಅಶಾಂತಿ ಸೃಷ್ಟಿಸುತ್ತಿದೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಕುರಿತು ತಪ್ಪು ಮಾಹಿತಿ ಹರಡುತ್ತಿದ್ದು, ಅದರ ಅನುಷ್ಠಾನಕ್ಕೆ ಅಡ್ಡಿಪಡಿಸುತ್ತಿದೆ ಎಂದು ಪಕ್ಷದ ನಾಯಕರು ದೂರಿದ್ದಾರೆ.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಎಂಎಲ್‌ಸಿ ಮಹಾಂತೇಶ್ ಕವಟಗಿಮಠ, ಮಾಜಿ ಶಾಸಕ ವಿಶ್ವನಾಥ ಪಾಟೀಲ್, ಮಾಜಿ ಸಂಸದ ಈರಣ್ಣ ಕಡಾಡಿ, ಬಿಜೆಪಿ ವಕ್ತಾರ ಎಂ.ಬಿ. ಜಿರಾಲಿ, ಉಜ್ವಲಾ ಬಡವನಾಚೆ, ಬೆಳಗಾವಿ ಗ್ರಾಮೀಣ ಬಿಜೆಪಿ ಅಧ್ಯಕ್ಷ ಯುವರಾಜ್ ಜಾಧವ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬೆಳಗಾವಿ ಉತ್ತರ ಮಂಡಲ ಅಧ್ಯಕ್ಷ ವಿಜಯ್ ಕೊಡಗನೂರ್ ಮತ್ತು ಬೆಳಗಾವಿ ದಕ್ಷಿಣ ಮಂಡಲ ಅಧ್ಯಕ್ಷ ರಾಜಕುಮಾರ್ ಪಾವಲೆ ಮತ್ತು ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X