ಬಸವಣ್ಣನವರಿಗೆ ಅವಮಾನ ಮಾಡಿದ ಆರೋಪ: 'ಬಸವ ಮಂಟಪ' ಪುಸ್ತಕದ ಲೇಖಕ, ಪ್ರಕಾಶಕರ ವಿರುದ್ಧ FIR ದಾಖಲು

ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ, ಇಬ್ಬರು ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Author Ravi Hanje
ಲೇಖಕ ರವಿ ಹಂಜೆ
Updated on: 

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಹಾಗೂ ಕವಿ ಬಸವಣ್ಣನವರಿಗೆ ಅವಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ನೆಲೆಸಿರುವ 'ಬಸವ ಮಂಟಪ' ಪುಸ್ತಕದ ಲೇಖಕ ರವಿ ಹಂಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಇಂದು ಶುಕ್ರವಾರ ತಿಳಿಸಿದ್ದಾರೆ.

ಪುಸ್ತಕದ ಪ್ರಕಾಶಕರೂ ಆಗಿರುವ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಹೆಸರನ್ನೂ ಪ್ರಕರಣದಲ್ಲಿ ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ, ಇಬ್ಬರು ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗಲಭೆ ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು (ಸೆಕ್ಷನ್ 192), ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಮತ್ತಿತರ ಆಧಾರಗಳಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು (ಸೆಕ್ಷನ್ 196(1)), ಸಾರ್ವಜನಿಕರಿಗೆ ಕಿಡಿಗೇಡಿತನ ಉಂಟುಮಾಡುವ ಹೇಳಿಕೆಗಳನ್ನು ನೀಡುವುದು (ಸೆಕ್ಷನ್ 353(2)) ಹಾಗೂ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದ ದುರುದ್ದೇಶಪೂರಿತ ಕೃತ್ಯಗಳು (ಸೆಕ್ಷನ್ 299) ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ನಿನ್ನೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 'ಬಸವ ಮಂಟಪ' ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅದರ ಲೇಖಕ ರವಿ ಹಂಜ್ ಮತ್ತು ಕನ್ನಡ ಪತ್ರಿಕೆಯ ಸಂಪಾದಕರೂ ಆಗಿರುವ ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

Author Ravi Hanje
'ಬಸವ ಮಂಟಪ' ಪುಸ್ತಕ ಮುಟ್ಟುಗೋಲು ಹಾಕಿ, ಪ್ರಕಟಿಸಿದವರ ವಿರುದ್ಧ ಕಾನೂನು ಕ್ರಮ: ಸಿಎಂ ಡಿ.ಕೆ. ಶಿವಕುಮಾರ್; Video

ಬಸವಣ್ಣನವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಬಹುದೊಡ್ಡ ವರ್ಗ ಅಸಮಾಧಾನ ವ್ಯಕ್ತಪಡಿಸಿತ್ತು. ಸಮಾಜ ಸುಧಾರಕರನ್ನು ಅವಹೇಳನ ಮಾಡಿ, ಅವಮಾನಿಸಿದ್ದಾರೆ ಎಂದು ಆರೋಪಿಸಿ, ವಿಶ್ವವಾಣಿ ಟಿವಿಗೆ ನೀಡಿದ ಸಂದರ್ಶನದ ಹಿನ್ನೆಲೆಯಲ್ಲಿ ರವಿ ಹಂಜ್ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿತ್ತು. ಈ ಸಂದರ್ಶನದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ವಿವಾದ ಭುಗಿಲೆದ್ದು, ಬಳಿಕ ಹಂಜ್ ಕ್ಷಮೆಯಾಚಿಸಿದ್ದರು.

ಬಸವೇಶ್ವರರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿವೆ ಎನ್ನಲಾದ ರವಿ ಹಂಜ್ ಅವರ ಎಲ್ಲ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿತ್ತು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಭೆ ಒಪ್ಪಿಗೆ ಸೂಚಿಸಿತ್ತು.

'ವಿಶ್ವವಾಣಿ' ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರು 'ಎಕ್ಸ್'ನಲ್ಲಿ ಪ್ರಕಟಿಸಿದ ಸ್ಪಷ್ಟೀಕರಣದಲ್ಲಿ, ವೈಯಕ್ತಿಕ ಲೇಖಕರ ಅಭಿಪ್ರಾಯಗಳಿಗೆ ಪತ್ರಿಕೆಯನ್ನು ಹೊಣೆಗಾರರನ್ನಾಗಿ ಮಾಡಲಾಗದು ಎಂದು ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ರವಿ ಹಂಜ್ ಅವರು 'ಬಸವ ಮಂಟಪ' ಅಂಕಣದಡಿ ಪತ್ರಿಕೆಗೆ ಲೇಖನಗಳನ್ನು ಬರೆಯುತ್ತಿದ್ದರು. ಈ ಲೇಖನಗಳನ್ನು ಬಳಿಕ ಒಟ್ಟುಗೂಡಿಸಿ 'ಬಸವ ಮಂಟಪ: ಲಿಂಗಾಯತ ವೀರಶೈವ ಸತ್ಯದರ್ಶನ' ಎಂಬ ಶೀರ್ಷಿಕೆಯಡಿ ಪುಸ್ತಕವಾಗಿ ಪ್ರಕಟಿಸಲಾಯಿತು ಎಂದು ಅವರು ಹೇಳಿದ್ದಾರೆ.

ರವಿ ಹಂಜ್ ಅವರು ಲೇಖನಗಳನ್ನು ಬರೆಯುತ್ತಿದ್ದ ಸಂದರ್ಭದಲ್ಲಿಯೇ ಆಗಾಗ್ಗೆ ಆಕ್ಷೇಪಣೆಗಳು ವ್ಯಕ್ತವಾಗಿದ್ದವು, ಪರ ಹಾಗೂ ವಿರೋಧದ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಲೇಖನಗಳಿಗೆ ನಾವು ಸಮಾನ ಅವಕಾಶ ನೀಡಿದ್ದೇವೆ. ಈ ವಿಷಯದ ಕುರಿತು ಆರೋಗ್ಯಕರ ಚರ್ಚೆಗೆ ವೇದಿಕೆ ಕಲ್ಪಿಸುವುದಷ್ಟೇ ಪತ್ರಿಕೆಯ ಉದ್ದೇಶವಾಗಿತ್ತು. ಇದನ್ನು ಹೊರತುಪಡಿಸಿ ಪತ್ರಿಕೆಗೆ ಈ ವಿಚಾರದಲ್ಲಿ ಯಾವುದೇ ಪಾತ್ರವಿಲ್ಲ ಎಂದು ವಿಶ್ವೇಶ್ವರ ಭಟ್ ಹೇಳಿದ್ದಾರೆ.

ವಿಶ್ವವಾಣಿ ಟಿವಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಹೇಳಿಕೆಗಳಿಂದ ಉಂಟಾದ ವಿವಾದದ ಕುರಿತು ರವಿ ಹಂಜ್ ಈಗಾಗಲೇ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಷಯದ ಪರ ಹಾಗೂ ವಿರೋಧದ ಅಭಿಪ್ರಾಯಗಳಿಗೆ ವಿಶ್ವವಾಣಿ ಕೇವಲ ವೇದಿಕೆಯಾಗಿದೆಯಷ್ಟೇ. ವೈಯಕ್ತಿಕ ಲೇಖಕರ ಅಭಿಪ್ರಾಯಗಳಿಗೆ ಪತ್ರಿಕೆಯನ್ನು ಹೊಣೆಗಾರರನ್ನಾಗಿ ಮಾಡಲಾಗದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X