'ದೇಶದ ಸಂಪತ್ತು ಮುಸ್ಲಿಮರಿಗೆ ಹಂಚಿಕೆ': ಸುದ್ದಿ ಮರುಹಂಚಿಕೊಂಡ ಮಾತ್ರಕ್ಕೆ ಕೋಮು ದ್ವೇಷ ಹರಡಿದಂತಲ್ಲ; ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಹೈಕೋರ್ಟ್!

2024ರ ಏಪ್ರಿಲ್ 29ರಂದು ಈ ಪ್ರಕರಣ ದಾಖಲಾಗಿತ್ತು. ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ತರುವ ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕೆಲವರು ಎಕ್ಸ್ ಖಾತೆಯ ಮೂಲಕ ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ.
Karnataka HC
ಹೈಕೋರ್ಟ್
Updated on: 

ಬೆಂಗಳೂರು: ಹಿಂದೂಗಳ ಸಂಪತ್ತನ್ನು ಕಾಂಗ್ರೆಸ್ ಪಕ್ಷ ಕಸಿದುಕೊಂಡು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಹಂಚಿಕೆ ಮಾಡಲು ಉದ್ದೇಶಿಸಿದೆ ಎಂದು ಆರೋಪಿಸಿ, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರದೊಂದಿಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಕೋಮು ದ್ವೇಷ ಹರಡುವ ಆರೋಪದಡಿ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಮುಂದುವರಿಯಲು ಯಾವುದೇ ಆಧಾರವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ರಾಜೇಶ್ ರೈ ಕೆ. ಅವರು ಈ ಆದೇಶ ಹೊರಡಿಸಿದ್ದು, ಪ್ರಕರಣ ರದ್ದುಗೊಳಿಸುವಂತೆ ಕೋರಿ ಮಹಾರಾಷ್ಟ್ರದ ಥಾಣೆಯ ವಿನಿತ್ ನಾರಾಯಣ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ದೂರು ಮತ್ತು ಎಫ್‌ಐಆರ್‌ನಲ್ಲಿರುವ ಎಲ್ಲ ಆರೋಪಗಳನ್ನು ಅವುಗಳ ಸಂಪೂರ್ಣ ಸತ್ಯವೆಂದು ಪರಿಗಣಿಸಿದರೂ ಅರ್ಜಿದಾರರ ವಿರುದ್ಧ ಯಾವುದೇ ಅಪರಾಧ ಕೃತ್ಯ ಸಾಬೀತಾಗುವುದಿಲ್ಲ. ಹೀಗಾಗಿ ಅವರ ವಿರುದ್ಧ ಎಫ್‌ಐಆರ್ ಮತ್ತು ಮುಂದಿನ ವಿಚಾರಣಾ ಪ್ರಕ್ರಿಯೆ ಮುಂದುವರಿಸುವುದು ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

2024ರ ಏಪ್ರಿಲ್ 29ರಂದು ಈ ಪ್ರಕರಣ ದಾಖಲಾಗಿತ್ತು. ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ತರುವ ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕೆಲವರು ಎಕ್ಸ್ ಖಾತೆಯ ಮೂಲಕ ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

Karnataka HC
Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ: ಹೈಕೋರ್ಟ್

ಅರ್ಜಿದಾರರ ಪರ ವಕೀಲರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಟೀಕಿಸುವ ಅಥವಾ ಅದರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಎಲೆಕ್ಟ್ರಾನಿಕ್ ಮಾಧ್ಯಮವೊಂದಕ್ಕೆ ನೀಡಿದ್ದ ಹೇಳಿಕೆಯೊಂದಿಗೆ ಪ್ರಕಟಿಸಲಾಗಿತ್ತು ಎಂದು ವಾದಿಸಿದ್ದರು.

ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಮಾಧ್ಯಮ ಸಂಸ್ಥೆಯೊಂದು ಬ್ರೇಕಿಂಗ್ ನ್ಯೂಸ್ ಪ್ರಸಾರ ಮಾಡಿತ್ತು. ಅದೇ ಸುದ್ದಿಯ ಚಿತ್ರವನ್ನು ಅರ್ಜಿದಾರರು ತಮ್ಮ ಎಕ್ಸ್ ಖಾತೆಯಲ್ಲಿ ಮರುಹಂಚಿಕೆ ಮಾಡಿದ್ದರು.

ಕೇವಲ ಸುದ್ದಿಯ ಚಿತ್ರವನ್ನು ಮರುಹಂಚಿಕೆ ಮಾಡಿರುವುದರಿಂದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ ಅಡಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.

ಇದಕ್ಕೆ ಪ್ರತಿಯಾಗಿ, ಅಂದಿನ ಕರ್ನಾಟಕ ಮುಖ್ಯಮಂತ್ರಿ ದೇಶದ ಸಂಪತ್ತನ್ನು ಮುಸ್ಲಿಂ ಸಮುದಾಯಕ್ಕೂ ಹಂಚಿಕೆ ಮಾಡುವುದಾಗಿ ಹೇಳಿದ್ದರು. ಈ ಹೇಳಿಕೆಯನ್ನು ಸುದ್ದಿವಾಹಿನಿಯೊಂದು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡುವಾಗ ರಾಷ್ಟ್ರದ ಸಂಪತ್ತನ್ನು ಮುಸ್ಲಿಮರಿಗೆ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಅವರ ಭಾವಚಿತ್ರವನ್ನು ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧ ದಾಖಲಾದ ಪ್ರಕರಣವನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ ಎಂದು ರಾಜ್ಯದ ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X