ರಾಜ್ಯದ ರೈತರಿಗೆ ಒಂದೇ ದಾಖಲೆಯಲ್ಲಿ ಭೂಮಿಯ ಸಮಗ್ರ ಮಾಹಿತಿ; ಹೊಸ ಮಾದರಿಯ ಪಹಣಿ ನಮೂನೆ 16-A!

ಈ ಹೊಸ ಪಹಣಿಯಲ್ಲಿ ರೈತನ ವಿವರಗಳು, ಬೆಳೆ ಮಾಹಿತಿ, ಆಧಾರ್ ಮಾಹಿತಿ, ಭಾವಚಿತ್ರ ಸೇರಿದಂತೆ ಭೂಮಿಗೆ ಸಂಬಂಧಿಸಿದ ಹಲವು ಮಾಹಿತಿಗಳು ಒಂದೇ ದಾಖಲೆಯಲ್ಲಿ ಲಭ್ಯವಾಗಲಿವೆ.
DCM Dr G Parameshwar
ಡಿಸಿಎಂ ಡಾ.ಜಿ. ಪರಮೇಶ್ವರ್
Updated on: 

ತುಮಕೂರು: ರಾಜ್ಯದ ರೈತರು ಪಹಣಿ, ಆಕಾರ್‌ಬಂದ್, ನಕಾಶೆ ಸೇರಿದಂತೆ ತಮ್ಮ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಹಣ ವೆಚ್ಚ ಮಾಡಿ, ಅರ್ಜಿಗಳನ್ನು ಸಲ್ಲಿಸಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಮಾದರಿಯ ‘ನಮೂನೆ 16ಎ’ ಪಹಣಿ ವ್ಯವಸ್ಥೆಯನ್ನು ರೂಪಿಸಲಾಗಿದೆ.

ಈ ಹೊಸ ಪಹಣಿಯಲ್ಲಿ ರೈತನ ವಿವರಗಳು, ಬೆಳೆ ಮಾಹಿತಿ, ಆಧಾರ್ ಮಾಹಿತಿ, ಭಾವಚಿತ್ರ ಸೇರಿದಂತೆ ಭೂಮಿಗೆ ಸಂಬಂಧಿಸಿದ ಹಲವು ಮಾಹಿತಿಗಳು ಒಂದೇ ದಾಖಲೆಯಲ್ಲಿ ಲಭ್ಯವಾಗಲಿವೆ ಎಂದು ಕಂದಾಯ ಸಚಿವರು ಆಗಿರುವ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಆಯೋಜಿಸಿದ್ದ ಪ್ರಜಾಸೇವೆ ಅಭಿಯಾನ ಉದ್ಘಾಟಿಸಿ ಮಾತನಾಡಿದ ಡಾ. ಜಿ. ಪರಮೇಶ್ವರ್, ಇದು ದೇಶದಲ್ಲಿಯೇ ಮೊದಲ ಬಾರಿಗೆ ರೂಪಿಸಲಾಗುತ್ತಿರುವ ವ್ಯವಸ್ಥೆಯಾಗಿದೆ. ರೈತರಿಗೆ ತಮ್ಮ ಭೂದಾಖಲೆಗಳನ್ನು ಸುಲಭವಾಗಿ ಪಡೆಯಲು ಅನುಕೂಲ ಕಲ್ಪಿಸುವುದು ಹಾಗೂ ಕಂದಾಯ ಇಲಾಖೆಯ ಸೇವೆಗಳನ್ನು ಮತ್ತಷ್ಟು ಸರಳಗೊಳಿಸುವುದು ಈ ವ್ಯವಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು.

ಜನರ ಮನೆ ಬಾಗಿಲಿಗೆ ಆಡಳಿತ; ಅರ್ಜಿಗಳ ತ್ವರಿತ ವಿಲೇವಾರಿಗೆ ಆದ್ಯತೆ: ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಹಲವು ಬಾರಿ ಅಲೆದಾಡಬೇಕಾದ ಪರಿಸ್ಥಿತಿಯಿದೆ. ಸಣ್ಣ ಕೆಲಸವೂ ಆಗದಿದ್ದಾಗ ಜನರು ನಿರಾಸೆಗೊಳ್ಳುತ್ತಾರೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸರ್ಕಾರವೇ ಜನರ ಬಳಿಗೆ ಹೋಗಬೇಕೆಂಬ ಆಶಯದಿಂದ ಪ್ರಜಾಸೇವೆ ಅಭಿಯಾನವನ್ನು ರೂಪಿಸಲಾಗಿದೆ. ಈ ಅಭಿಯಾನದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಅವುಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಸಾಧ್ಯವಾದಷ್ಟು ಅರ್ಜಿಗಳನ್ನು ಅಂದೇ ಸಂಜೆ ವೇಳೆಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಿದ್ದಾರೆ. ಬಾಕಿ ಉಳಿದಿರುವ ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ₹1.62 ಲಕ್ಷ ಕೋಟಿ ವೆಚ್ಚ; ನುಡಿದಂತೆ ನಡೆದಿದ್ದೇವೆ: ಚುನಾವಣೆಗೆ ಮುನ್ನ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದೆವು. ಆಗ ವಿರೋಧ ಪಕ್ಷದವರು ಗೇಲಿ ಮಾಡಿದ್ದರು. ಜನರಿಂದ ಮತ ಪಡೆದು ಯೋಜನೆಗಳನ್ನು ಜಾರಿಗೊಳಿಸುವುದಿಲ್ಲ ಎಂದು ಟೀಕಿಸಿದ್ದರು. ಆದರೆ ಎಲ್ಲ ಟೀಕೆಗಳ ನಡುವೆಯೂ ನಾವು ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.ಸರ್ಕಾರವು ಪ್ರತಿವರ್ಷ ಸುಮಾರು ₹50 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಿದೆ. ಈವರೆಗೆ ಒಟ್ಟು ₹1.62 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಬಡವರಿಗೆ ಸ್ವಂತ ನಿವೇಶನ; 15 ಲಕ್ಷ ನಿವೇಶನಗಳ ವಿತರಣೆಗೆ ನಿರ್ಧಾರ: ಕಂದಾಯ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಬಡವರ ಬದುಕಿಗೆ ಯಾವ ರೀತಿಯಲ್ಲಿ ನೆರವಾಗಬಹುದು ಎಂಬುದರ ಕುರಿತು ಯೋಚಿಸಿದೆ. ರಾಜ್ಯದ ಅನೇಕ ಗ್ರಾಮಗಳಲ್ಲಿ ಇಂದಿಗೂ ಬಡ ಕುಟುಂಬಗಳು ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಅವರಿಗೆ ಶಾಶ್ವತ ಸೂರು ಇಲ್ಲದಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿವೇಶನರಹಿತ ಬಡ ಕುಟುಂಬಗಳಿಗೆ 15 ಲಕ್ಷ ನಿವೇಶನಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ 20×30 ಅಡಿ ಅಳತೆಯ ನಿವೇಶನಗಳ ಬದಲಿಗೆ 30×40 ಅಡಿ ಅಳತೆಯ ನಿವೇಶನಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ ಈಗಾಗಲೇ 20 ಸಾವಿರ ನಿವೇಶನಗಳನ್ನು ಸಿದ್ಧಪಡಿಸಲಾಗಿದೆ. ಹಳ್ಳಿಹಳ್ಳಿಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಅರ್ಹ ಬಡ ಕುಟುಂಬಗಳನ್ನು ಗುರುತಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಪ್ರತಿಯೊಂದು ಬಡ ಕುಟುಂಬಕ್ಕೂ ಸ್ವಂತ ನೆಲೆಯ ಭದ್ರತೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

DCM Dr G Parameshwar
ಬಡವರಿಗೆ ಸ್ವಂತ ನಿವೇಶನ: ಜನವರಿಗೆ ಮೊದಲ ಹಂತದಲ್ಲಿ 5 ಲಕ್ಷ ಸೈಟು ಹಂಚಿಕೆ- ಡಿಸಿಎಂ ಡಾ. ಜಿ. ಪರಮೇಶ್ವರ್‌

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ₹6,000 ಕೋಟಿ ವೆಚ್ಚ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ₹16 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಅನುದಾನ ಒದಗಿಸಲಾಗಿದೆ. ವಿರೋಧ ಪಕ್ಷದ ಟೀಕೆಗಳಿಗೆ ಒಂದು ಇತಿಮಿತಿ ಇರಬೇಕು. ಇಂತಹ ಟೀಕೆಗಳಿಗೆ ನಾವು ಜಗ್ಗುವುದಿಲ್ಲ. ನೀಡಿದ ಭರವಸೆಗಳನ್ನು ಈಡೇರಿಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುತ್ತೇವೆ. 2028ರ ಚುನಾವಣೆಯಲ್ಲಿಯೂ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದು, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X