ಪರೀಕ್ಷಾ ವಿಧಾನಗಳಲ್ಲಿ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದ ಸಮಿತಿಯಿಂದ ಡಿಸೆಂಬರ್‌ನಲ್ಲಿ ವರದಿ ಸಲ್ಲಿಕೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರರೊಂದಿಗೆ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಈ ಮಾಹಿತಿ ನೀಡಿದರು. ವರದಿ ಅಂತಿಮ ಹಂತದಲ್ಲಿದ್ದು, ಸಭೆಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಪರಿಗಣಿಸಿ ವರದಿಯಲ್ಲಿ ಶಿಫಾರಸುಗಳನ್ನು ಮಾಡಲಾಗುವುದು ಎಂದು ನಿಲೇಕಣಿ ಹೇಳಿದರು.
Representational image
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಸುಧಾರಣೆ ತರುವ ಕುರಿತು ರಚಿಸಲಾಗಿರುವ ಉನ್ನತಾಧಿಕಾರ ಕಾರ್ಯಪಡೆ (HPTF)ಯ ಅಂತಿಮ ವರದಿಯನ್ನು ಡಿಸೆಂಬರ್‌ನಲ್ಲಿ ಸಲ್ಲಿಸಲಾಗುವುದು ಎಂದು ಅದರ ಅಧ್ಯಕ್ಷ ನಂದನ್ ನಿಲೇಕಣಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರರೊಂದಿಗೆ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಈ ಮಾಹಿತಿ ನೀಡಿದರು. ವರದಿ ಅಂತಿಮ ಹಂತದಲ್ಲಿದ್ದು, ಸಭೆಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಪರಿಗಣಿಸಿ ವರದಿಯಲ್ಲಿ ಶಿಫಾರಸುಗಳನ್ನು ಮಾಡಲಾಗುವುದು ಎಂದು ನಿಲೇಕಣಿ ಹೇಳಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮತ್ತು ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಸುಧಾರಣಾ ಕ್ರಮಗಳನ್ನು ನಿಲೇಕಣಿ ಶ್ಲಾಘಿಸಿದರು.

ದೇಶದ ಬಹುತೇಕ ರಾಜ್ಯಗಳು ನೇಮಕಾತಿ ಪರೀಕ್ಷೆಗಳ ಗಣಕೀಕರಣಕ್ಕೆ ಒಪ್ಪಿಗೆ ಸೂಚಿಸಿವೆ. ಆದರೆ, ಈ ವ್ಯವಸ್ಥೆಯಿಂದ ಗ್ರಾಮೀಣ ಪ್ರದೇಶಗಳ ಅಭ್ಯರ್ಥಿಗಳಿಗೆ ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ನೇಮಕಾತಿ ಪರೀಕ್ಷೆಗಳನ್ನು ನಡೆಸುವಲ್ಲಿ ವಿಕೇಂದ್ರೀಕೃತ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರುವ ಸಾಧ್ಯತೆ ಬಗ್ಗೆಯೂ ವರದಿಯಲ್ಲಿ ಶಿಫಾರಸುಗಳನ್ನು ಸೇರಿಸಲಾಗುವುದು ಎಂದು ನಿಲೇಕಣಿ ತಿಳಿಸಿದರು.

ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಸುರಕ್ಷಿತ ಹಾಗೂ ಪಾರದರ್ಶಕ ವ್ಯವಸ್ಥೆಯ ಮೂಲಕ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸುವ ಅಂಕಗಳ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ಅವರ ಶೈಕ್ಷಣಿಕ ಸಾಧನೆಯನ್ನೂ ಪರಿಗಣಿಸಬೇಕು. ಇತ್ತೀಚೆಗೆ ನಡೆಸಲಾದ KAS (ಕರ್ನಾಟಕ ಆಡಳಿತ ಸೇವೆ) ಪೂರ್ವಭಾವಿ ಪರೀಕ್ಷೆಗಳನ್ನು ಯಾವುದೇ ಅಕ್ರಮ ಅಥವಾ ಅವ್ಯವಹಾರಕ್ಕೆ ಅವಕಾಶವಿಲ್ಲದಂತೆ ಸಮರ್ಥವಾಗಿ ನಿರ್ವಹಿಸಲಾಗಿದೆ ಎಂದು ಶಿವಕುಮಾರ್ ಹೇಳಿದರು.

ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ರಾಜ್ಯದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದೂ ಮುಖ್ಯಮಂತ್ರಿ ಒತ್ತಾಯಿಸಿದರು.

Representational image
ಪ್ರಶ್ನೆಪತ್ರಿಕೆ ಸೋರಿಕೆ ತಪ್ಪಿಸಲು ನಂದನ್ ನಿಲೇಕಣಿ ಹೊಸ ಐಡಿಯಾ; ದೇಶದಾದ್ಯಂತ ಇನ್ಮುಂದೆ AI ಆಧಾರಿತ ಪರೀಕ್ಷೆ?

ನೀಟ್‌ನಂತಹ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸುವುದು ಕಷ್ಟ. ಆದ್ದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಬೇಕು ಎಂದು ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿಗಳನ್ನು ಹೋಗಲಾಡಿಸಲು 'ಸತ್ಯಾಸತ್ಯತೆ ಪರಿಶೀಲನಾ' ವ್ಯವಸ್ಥೆಯನ್ನೂ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬರುವವರೆಗೆ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಲಾಗಿದೆ. ಅಭ್ಯರ್ಥಿಗಳಿಗೆ ಸಮಾಲೋಚನೆ ಒದಗಿಸಲು, ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡಲು '104' ಸಹಾಯವಾಣಿ ಲಭ್ಯವಾಗುವಂತೆ ಮಾಡಲಾಗಿದೆ. ಬಲಿಷ್ಠ ಹಾಗೂ ಸುರಕ್ಷಿತ ಪರೀಕ್ಷಾ ವ್ಯವಸ್ಥೆ ರೂಪಿಸಲು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಮಾಹಿತಿಯನ್ನು ಉನ್ನತಾಧಿಕಾರ ಸಮಿತಿಯ ಮುಂದೆ ಮಂಡಿಸಲಾಗುವುದು ಎಂದು ಹೇಳಿದರು.

Representational image
ಪಾರದರ್ಶಕತೆಗೆ KPSC ದಿಟ್ಟ ಹೆಜ್ಜೆ: ಪರೀಕ್ಷೆ ಮುಗಿದ 24 ಗಂಟೆಯಲ್ಲೇ OMR ರಿಲೀಸ್, ಆದ್ರೆ ವೆಬ್‌ಸೈಟ್ ಡೌನ್..!

ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೆಇಎ ನಡೆಸಿದ ಪರೀಕ್ಷೆಗಳಿಗೆ ಒಟ್ಟು 43,91,248 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಲ್ಲಿ 30,50,996 ಮಂದಿ ಪರೀಕ್ಷೆ ಬರೆದಿದ್ದಾರೆ. ಈ ಪರೀಕ್ಷೆಗಳಲ್ಲಿ ಒಟ್ಟು 17,29,318 ಒಎಂಆರ್ ಹಾಳೆಗಳನ್ನು ಬಳಸಲಾಗಿದೆ ಎಂದು ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇಮಕಾತಿ ಸುಧಾರಣಾ ಸಮಿತಿಯ ಅಧ್ಯಕ್ಷ ಎಸ್.ವಿ. ರಂಗನಾಥ್ ತಿಳಿಸಿದರು.

ಗಣಕ ಆಧಾರಿತ ಪರೀಕ್ಷೆಗಳನ್ನು ನಡೆಸಲು ಕಂಪ್ಯೂಟರ್ ವ್ಯವಸ್ಥೆಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸ್ಥಾಪಿಸಲು ಗಣನೀಯ ವೆಚ್ಚವಾಗಲಿದೆ. ಹೀಗಾಗಿ, ವಿವಿಧ ಪರೀಕ್ಷೆಗಳನ್ನು ನಡೆಸುವುದಕ್ಕಾಗಿಯೇ ಮೀಸಲಾದ ಗಣಕ ಆಧಾರಿತ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯವಿದೆ. ಕೇಂದ್ರ ಪ್ರಾಯೋಜಿತ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಅನುದಾನದ ಮೂಲಕ ಈ ವೆಚ್ಚವನ್ನು ಹಂತ ಹಂತವಾಗಿ ಭರಿಸಬಹುದು. ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೆಚ್ಚದ ಹೊಣೆಯನ್ನು ಹಂಚಿಕೊಳ್ಳಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X