10 ದಿನಗಳ ಕಲಾಪಕ್ಕೆ ಸುವರ್ಣ ವಿಧಾನಸೌಧ ಸಜ್ಜು: ಉತ್ತರ ಕರ್ನಾಟಕದ ಸಮಸ್ಯೆಗಳೇ ಅಧಿವೇಶನದ ಕೇಂದ್ರಬಿಂದು..!

ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಪ್ರಾದೇಶಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿದ್ದು, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕಾರ್ಯನಿರ್ವಹಿಸುವಂತೆ ಪ್ರೋತ್ಸಾಹಿಸಲಾಗುವುದು.
Suvarna Vidhana Soudha
ಸುವರ್ಣ ವಿಧಾನಸೌಧ
Updated on: 

ಬೆಳಗಾವಿ: ಡಿಸೆಂಬರ್ 2ರಿಂದ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನದಲ್ಲಿ ಅಭಿವೃದ್ಧಿ ವಿಚಾರಗಳಿಗೆ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಮತ್ತು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಶನಿವಾರ ತಿಳಿಸಿದ್ದಾರೆ.

ಶನಿವಾರ ಸುವರ್ಣ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಪ್ರಾದೇಶಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿದ್ದು, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕಾರ್ಯನಿರ್ವಹಿಸುವಂತೆ ಪ್ರೋತ್ಸಾಹಿಸಲಾಗುವುದು ಎಂದು ಭರವಸೆ ನೀಡಿದರು.

ಅಧಿವೇಶನದ ವೇಳೆ ಜನರು ಪ್ರತಿಭಟನೆಗೆ ಇಳಿಯುವ ಮುನ್ನವೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಪಾಟೀಲ್ ಹೇಳಿದರು.

ಸದನದ ಕಲಾಪಗಳಿಗೆ ಅಡ್ಡಿಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಅಭಿವೃದ್ಧಿ ವಿಚಾರಗಳ ಚರ್ಚೆಗೆ ಸಾಕಷ್ಟು ಸಮಯ ಮೀಸಲಿಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಅಧಿವೇಶನದಲ್ಲಿ ಭಾಗವಹಿಸುವ ಶಾಸಕರು ಹಾಗೂ ಇತರರಿಗೆ ವಸತಿ, ಊಟ, ಸಾರಿಗೆ, ಭದ್ರತೆ, ನಿರಂತರ ವಿದ್ಯುತ್ ಪೂರೈಕೆ ಮತ್ತು ಅಂತರ್ಜಾಲ ಸೌಲಭ್ಯ ಕಲ್ಪಿಸಲು ಸಿದ್ಧತೆಗಳು ನಡೆಯುತ್ತಿವೆ ಎಂದರು.

Suvarna Vidhana Soudha
ಚಳಿಗಾಲದ ಅಧಿವೇಶನ: ಮೀಸಲಾತಿ, ಅನುದಾನ 'ದುರುಪಯೋಗ' ವಿಚಾರ ಮುಂದಿಟ್ಟು ಸರ್ಕಾರಕ್ಕೆ ಬಿಸಿ ಮುಟ್ಟಿಸಲು BJP ತಂತ್ರ..!

ಹೊಸ ಉಪಕ್ರಮಗಳ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪುಸ್ತಕ ಮೇಳ, ಯೋಗಾಭ್ಯಾಸ ಮತ್ತು ಶಾಲಾ ಮಕ್ಕಳಿಗಾಗಿ ಕೃತಕ ಬುದ್ಧಿಮತ್ತೆ ಆಧಾರಿತ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಶಾಸಕರಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಶಾಸಕರ ಭವನದ ಮಾದರಿಯಲ್ಲಿ ಪ್ರತ್ಯೇಕ ಕಟ್ಟಡ ನಿರ್ಮಿಸುವ ಪ್ರಸ್ತಾವನೆಯೂ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಾಟೀಲ್ ಹೇಳಿದರು.

ಅಧಿವೇಶನಗಳ ಹೊರತಾಗಿಯೂ ಸುವರ್ಣ ವಿಧಾನಸೌಧವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಪ್ರತಿ ತಿಂಗಳು ವಿಧಾನಮಂಡಲದ ಒಂದು ಸಮಿತಿ ಸಭೆಯನ್ನು ಇಲ್ಲಿಯೇ ನಡೆಸಲು ಯೋಜಿಸಲಾಗಿದೆ ಎಂದರು.

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ವಿಶೇಷ ಗಮನ ನೀಡುವುದರ ಜೊತೆಗೆ ರಾಜ್ಯದ ಸಮಗ್ರ ಅಭಿವೃದ್ಧಿ ಕುರಿತೂ ಚರ್ಚೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದರು. ಅಧಿವೇಶನದಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ಅಗತ್ಯ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X