ರೈತರಿಗೆ ಹಾಲು ಪ್ರೋತ್ಸಾಹಧನ ಹೆಚ್ಚಳ: ಹಾಸನದಲ್ಲಿ ಕೃತಜ್ಞತಾ ಸಮಾವೇಶ- ಸಚಿವ ಶಿವಲಿಂಗೇಗೌಡ

ಬೆಂಗಳೂರು: ರಾಜ್ಯ ಸರ್ಕಾರ ಹಾಲು ಉತ್ಪಾದಕ ರೈತರಿಗೆ ಪ್ರತಿ ಲೀಟರ್ ಹಾಲಿಗೆ 7 ರೂ. ಪ್ರೋತ್ಸಾಹಧನವನ್ನು ನೇರವಾಗಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 13ರಂದು ಹಾಸನದಲ್ಲಿ ಕೃತಜ್ಞತಾ ಸಮಾವೇಶ ಆಯೋಜಿಸಲಾಗುವುದು ಎಂದು ಸಚಿವ ಶಿವಲಿಂಗೇಗೌಡ ತಿಳಿಸಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕರು, ರೈತರು ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಹೈನುಗಾರಿಕೆ ಕ್ಷೇತ್ರವೂ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ ಎಂದು ಹೇಳಿದ್ದಾರೆ.
ಹಾಲು ಒಕ್ಕೂಟಗಳ ಅಧ್ಯಕ್ಷರು ಈ ಸಮಾವೇಶ ನಡೆಸುವಂತೆ ಮನವಿ ಮಾಡಿದ್ದರು. ರೈತರ ಪರವಾಗಿ ನಿಂತು ನೆರವು ನೀಡಿದವರನ್ನು ಸ್ಮರಿಸಬೇಕು ಎಂಬ ಉದ್ದೇಶದಿಂದ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಆನೆ ಸ್ಥಳಾಂತರ ನಿರ್ಧಾರದಲ್ಲಿ ನನ್ನ ಪಾತ್ರವಿಲ್ಲ
ಇದೇ ವೇಳೆ ಹಾಸನ ಜಿಲ್ಲೆಯಲ್ಲಿ ಆನೆ ಸ್ಥಳಾಂತರ ವಿಚಾರವಾಗಿ ಉಂಟಾಗಿರುವ ವಿವಾದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಸ್ಪಷ್ಟಪಡಿಸಿದ್ದಾರೆ.
ಅರಣ್ಯ ಸಚಿವರ ಸೂಚನೆಯಂತೆ ಅಧಿಕಾರಿಗಳು ಆನೆ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುತ್ತಿದ್ದಾರೆ. ಈ ನಿರ್ಧಾರಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ಈ ವಿಚಾರವಾಗಿ ಅಸಮಾಧಾನಗೊಂಡಿರುವ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿರುವುದು ಅವರ ವೈಯಕ್ತಿಕ ವಿಚಾರ. ಅದು ಅವರ ಭಾವನೆ ಮತ್ತು ನಿರ್ಧಾರಕ್ಕೆ ಸಂಬಂಧಿಸಿದ್ದು ಎಂದು ಹೇಳಿದರು.
ಅಲ್ಲದೆ, ಈ ವಿವಾದದಲ್ಲಿ ನಯನಾ ಮೋಟಮ್ಮ ಅವರು ತಮ್ಮ ಹೆಸರನ್ನು ಪ್ರಸ್ತಾಪಿಸಿಲ್ಲ. ಹೀಗಾಗಿ ಈ ವಿಚಾರಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದು ಮನವಿ ಮಾಡಿದ್ದಾರೆ.
"ನಾನು ನಿನ್ನೆ ರಾತ್ರಿ ನಯನಾ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ನಿಭಾಯಿಸುವಂತೆ ಮನವಿ ಮಾಡಿದ್ದೇನೆ. ನನ್ನ ಅಭಿಪ್ರಾಯವನ್ನೂ ಅವರಿಗೆ ತಿಳಿಸಿದ್ದೇನೆ. ನನ್ನ ಮನವಿಯನ್ನು ಒಪ್ಪಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ" ಎಂದು ಶಿವಲಿಂಗೇಗೌಡ ಹೇಳಿದ್ದಾರೆ.
ಭದ್ರಾ ಅಭಯಾರಣ್ಯಕ್ಕೆ ಆನೆ ಸ್ಥಳಾಂತರ
ಆನೆ ಅರಣ್ಯ ಪ್ರದೇಶವಲ್ಲದ ಸ್ಥಳಕ್ಕೆ ಪ್ರವೇಶಿಸಿರುವುದರಿಂದ ಅದನ್ನು ಅಲ್ಲಿಯೇ ಬಿಡಲು ಸಾಧ್ಯವಿಲ್ಲ. ಕೃಷಿ ಜಮೀನುಗಳಿಗೆ ನುಗ್ಗಿ ರೈತರ ಬೆಳೆಗಳಿಗೆ ಹಾನಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ಸ್ಥಳಾಂತರಕ್ಕೆ ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
ಅರಣ್ಯ ಇಲಾಖೆಯ ಸೂಚನೆಯಂತೆ ಆನೆಯನ್ನು ಚಿಕ್ಕಮಗಳೂರು ಮಾರ್ಗವಾಗಿ ಭದ್ರಾ ವನ್ಯಜೀವಿ ಅಭಯಾರಣ್ಯಕ್ಕೆ ಕರೆದೊಯ್ದು ಬಿಡಲು ತೀರ್ಮಾನಿಸಲಾಗಿದೆ. ಸುಮಾರು ಒಂದು ಲಕ್ಷ ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಭದ್ರಾ ಅಭಯಾರಣ್ಯ ಆನೆ ಸ್ಥಳಾಂತರಕ್ಕೆ ಸೂಕ್ತ ತಾಣವಾಗಿದೆ ಎಂದು ಅವರು ಹೇಳಿದ್ದಾರೆ.
ಆನೆಯನ್ನು ಅದೇ ಸ್ಥಳದಲ್ಲಿ ಶಾಶ್ವತವಾಗಿ ಇರಿಸಲಾಗುತ್ತದೆ ಎಂಬ ಆತಂಕದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಜನರ ಆತಂಕ ಅರ್ಥವಾಗುತ್ತದೆ. ಆದರೆ ಈ ಪ್ರಕ್ರಿಯೆಯಿಂದ ಸುಮಾರು 15 ದಿನಗಳ ಕಾಲ ಮಾತ್ರ ಕೆಲವು ಅನಾನುಕೂಲಗಳು ಉಂಟಾಗಬಹುದು. ಈಗಾಗಲೇ ಕೈಗೊಂಡಿರುವ ನಿರ್ಧಾರದಂತೆ ಸ್ಥಳಾಂತರ ಕಾರ್ಯ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




