ರಾಜ್ಯ

ಮುಂದಿನ 5-10 ವರ್ಷಗಳಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ನಿಶ್ಚಿತ: ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್!

ಮುಂದಿನ 5-10 ವರ್ಷಗಳಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ನಿಶ್ಚಿತ: ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್!
ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ
Published On :

ಬೆಳಗಾವಿ: ಡಿಸೆಂಬರ್ 2 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ, ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು "ಮುಂದಿನ 5 ರಿಂದ 10 ವರ್ಷಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಒಳ್ಳೆಯದು ಅನ್ನಿಸುತ್ತದೆ" ಎಂದು ಹೇಳಿಕೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಪ್ರತ್ಯೇಕ ರಾಜ್ಯದ ಪರ ಬ್ಯಾಟಿಂಗ್

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, "ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಒಳ್ಳೆಯದು ಅಂತಾ ಒಮ್ಮೊಮ್ಮೆ ನಮಗೂ ಅನಿಸುತ್ತದೆ. ಮುಂದಿನ ಐದರಿಂದ ಹತ್ತು ವರ್ಷಗಳಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಯಾಗುವುದು ನಿಶ್ಚಿತ" ಎಂದರು. ಇದೆ ವೇಳೆ, ದಿವಂಗತ ಮಾಜಿ ಸಚಿವ ಉಮೇಶ್ ಕತ್ತಿ ಅವರು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬಗ್ಗೆ ಪದೇ ಪದೇ ಪ್ರಸ್ತಾಪಿಸುತ್ತಿದ್ದನ್ನು ನೆನಪಿಸಿಕೊಂಡ ಜಾರಕಿಹೊಳಿ, "ಪ್ರತ್ಯೇಕ ರಾಜ್ಯವಾದರೆ ಬೆಳಗಾವಿ ರಾಜಧಾನಿಯಾಗುತ್ತದೆ ಮತ್ತು ಆಗ ಈ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಉಮೇಶ್ ಕತ್ತಿ ಹೇಳುತ್ತಿದ್ದರು. ಈಗಿನ ಪರಿಸ್ಥಿತಿ ಗಮನಿಸಿದರೆ ಅವರ ಮಾತು ಸತ್ಯ ಅನಿಸುತ್ತದೆ" ಎಂದು ತಿಳಿಸಿದ್ದಾರೆ.

ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯದ ಆರೋಪ

ಮುಂದುವರೆದು, ಉತ್ತರ ಕರ್ನಾಟಕ ಭಾಗಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಮತ್ತು ಅಭಿವೃದ್ಧಿ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, "ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದರೂ ಕೇವಲ 10 ದಿನಗಳ ಅಧಿವೇಶನಕ್ಕೆ ಮಾತ್ರ ಸೀಮಿತವಾಗಿದೆ. ಅಧಿವೇಶನಕ್ಕೆ ಬರುವವರು ಅಮೆರಿಕದ ವೀಸಾ ತೆಗೆದುಕೊಂಡು ಬಂದಂತೆ ಮಾಡುತ್ತಾರೆ" ಎಂದು ಟೀಕಿಸಿದ್ದಾರೆ. ಇದರೊಂದಿಗೆ, ಮುಂದಿನ ಅಧಿವೇಶನದಲ್ಲಿ ಕನಿಷ್ಠ 5 ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳು ಹಾಗೂ ರೈತರ ಪರಿಹಾರದ ಕುರಿತು ಚರ್ಚಿಸಲು ಬಿಜೆಪಿ ಹೋರಾಟ ನಡೆಸಲಿದೆ ಎಂದಿದ್ದಾರೆ.

ಸುಮ್ಮನೆ ತೆವಲಿಗೆ ಮಾತನಾಡುತ್ತಾರೆ

ಜಾರಕಿಹೊಳಿ ಅವರ ಹೇಳಿಕೆಗೆ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಹೆಚ್.ಸಿ. ಬಾಲಕೃಷ್ಣ, "ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರ ಇದ್ದಾಗ ಉತ್ತರ ಕರ್ನಾಟಕವನ್ನು ಏಕೆ ಅಭಿವೃದ್ಧಿಪಡಿಸಲಿಲ್ಲ? ಈಗ ಸುಮ್ಮನೆ ತೆವಲಿಗೆ ಮಾತನಾಡುತ್ತಾರೆ" ಎಂದು ಟಾಂಗ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಕೂಡ ಉತ್ತರ ಕರ್ನಾಟಕದ ಅಭಿವೃದ್ಧಿಯ ನಿರ್ಲಕ್ಷ್ಯವನ್ನು ಖಂಡಿಸಿ, 15 ಜಿಲ್ಲೆಗಳನ್ನು ಒಳಗೊಂಡ ಪ್ರತ್ಯೇಕ ರಾಜ್ಯ ರಚಿಸುವಂತೆ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂಬುದು ಗಮನಾರ್ಹ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.