ರಾಜ್ಯ

ಬೆನ್ನು ನೋವಿನಿಂದ ನರಳುತ್ತಿರುವ ದರ್ಶನ್‌: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಗೆ ಕೋರ್ಟ್ ಅನುಮತಿ

ಬೆನ್ನು ನೋವಿನಿಂದ ನರಳುತ್ತಿರುವ ದರ್ಶನ್‌: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಗೆ ಕೋರ್ಟ್ ಅನುಮತಿ
ನಟ ದರ್ಶನ್
Published On :

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬೆನ್ನುನೋವಿನ ಚಿಕಿತ್ಸೆಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸಿಸಿಹೆಚ್ (CCH) ನ್ಯಾಯಾಲಯವು, ಫಿಸಿಯೋಥೆರಪಿ ಅವಶ್ಯಕತೆ ಇದ್ದರೆ ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅವಕಾಶ ನೀಡಿದೆ.

ಅಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ಕೋರಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರಾಸಿಕ್ಯೂಷನ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ತಮಗೆ ಬಿಜಿಎಸ್ ಅಥವಾ ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿ ದರ್ಶನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ಜೈಲು ಅಧಿಕಾರಿಗಳು ದರ್ಶನ್ ಅವರ ಆರೋಗ್ಯ ತಪಾಸಣಾ ವರದಿಯನ್ನು ಇ-ಮೇಲ್ ಮೂಲಕ ಸೆಷನ್ಸ್ ಕೋರ್ಟ್‌ಗೆ ಸಲ್ಲಿಸಿದರು. ನ್ಯಾಯಾಲಯವು ಈ ವರದಿಯ ಪ್ರತಿಗಳನ್ನು ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಹಸ್ತಾಂತರಿಸಿತು.

ವಿಚಾರಣೆ ವೇಳೆ ಜೈಲಿನಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯ ಲೋಪಗಳ ಕುರಿತು ದರ್ಶನ್ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದರು. ಜೈಲಿನಲ್ಲಿ ಕಳೆದ 7ನೇ ತಾರೀಖು ಮತ್ತು 20ನೇ ತಾರೀಖಿನಂದು ಮಾತ್ರ ಫಿಸಿಯೋಥೆರಪಿ ಮಾಡಿಸಿದ್ದಾರೆ.

ಎರಡು ಚಿಕಿತ್ಸೆಗಳ ನಡುವೆ ಇಷ್ಟೊಂದು ದಿನಗಳ ಕಾಲ ಅಂತರವಿದೆ; ಇದಕ್ಕಾಗಿಯೇ ನಾವು ಚಿಕಿತ್ಸೆಗೆ ಅನುಮತಿ ಕೋರಿ ಅರ್ಜಿ ಹಾಕಿದ್ದೇವೆ. 12 ವರ್ಷಗಳ ಹಿಂದೆಯೇ ದರ್ಶನ್ ಬೆನ್ನಿಗೆ ಇಂಜೆಕ್ಷನ್ ತೆಗೆದುಕೊಂಡಿದ್ದರು ಮತ್ತು ಅಂದಿನಿಂದಲೂ ಇಂಜೆಕ್ಷನ್ ಪಡೆಯುತ್ತಾ ಬಂದಿದ್ದಾರೆ. ಈಗಲೂ ಅದರ ಅವಶ್ಯಕತೆ ಇದೆ ಎನಿಸುತ್ತಿದೆ ಎಂದು ವಕೀಲರು ವಾದಿಸಿದರು.

ಜೈಲಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯ ಹಾಗೂ ಚಿಕಿತ್ಸೆ ಸಿಗುತ್ತಿಲ್ಲ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಸೂಕ್ತ ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.