ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಕೈಬಿಟ್ಟು, ಕರ್ತವ್ಯಕ್ಕೆ ಮರಳಿ: ಸಿಎಂ ಡಿಕೆ ಶಿವಕುಮಾರ್ ಮನವಿ, ಬೇಡಿಕೆಗಳ ಈಡೇರಿಕೆಯ ಭರವಸೆ!

ಬೆಂಗಳೂರು: ಮಾಸಿಕ 15,000 ರೂಪಾಯಿ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 10 ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು, ತಮ್ಮ ಪ್ರತಿಭಟನೆಯನ್ನು ಕೈಬಿಟ್ಟು ಕರ್ತವ್ಯಕ್ಕೆ ಮರಳಬೇಕೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಮನವಿ ಮಾಡಿದ್ದಾರೆ. ಅಲ್ಲದೆ, ಅವರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಅರ್ಥವಾಗಿದ್ದು, ಸಂಬಂಧಪಟ್ಟ ಎಲ್ಲರೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು, ತಮ್ಮ ಮೇಲೆ ವಿಶ್ವಾಸವಿಡುವಂತೆ ಅವರು ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಆಶಾ ಕಾರ್ಯಕರ್ತೆಯರ ಸಮಸ್ಯೆಗಳು ನನಗೆ ಅರ್ಥವಾಗಿವೆ. ದಯವಿಟ್ಟು ಕೆಲಸಕ್ಕೆ ಮರಳಿ. ನೀವು ಜನಸೇವೆ ಮಾಡುವ ಉದ್ದೇಶದಿಂದ ಈ ಕ್ಷೇತ್ರಕ್ಕೆ ಬಂದಿದ್ದೀರಿ, ಪ್ರತಿಭಟನೆ ನಡೆಸಲು ಬಂದಿಲ್ಲ. ಈ ಹೋರಾಟ ಕೇವಲ ನಿಮ್ಮದಷ್ಟೇ ಅಲ್ಲ; ಪ್ರತಿಯೊಬ್ಬರಿಗೂ ಅವರದೇ ಆದ ಸಂಕಷ್ಟಗಳಿರುತ್ತವೆ. ಆದರೆ, ಇಂತಹ ವಿಷಯಕ್ಕಾಗಿ ಪ್ರತಿಭಟನೆಯ ಹಾದಿ ಹಿಡಿಯುವುದು ಸರಿಯಲ್ಲ ಎಂದರು."ನಾನು ಎಲ್ಲರನ್ನೂ ಕರೆದು ಸಭೆ ನಡೆಸುತ್ತೇನೆ ಮತ್ತು ನಿರ್ಧಾರ ತೆಗೆದುಕೊಳ್ಳುತ್ತೇನೆ. ನಿಮಗೆ ಸಹಾಯ ಮಾಡುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ ಎಂದು ಅವರು ಹೇಳಿದರು.
ಈ ವಿಷಯವನ್ನು ರಾಜಕೀಯಗೊಳಿಸಲು ಅಥವಾ ಎನ್‌ಡಿಎ (NDA) ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದ ಶಿವಕುಮಾರ್, ಈ ಯೋಜನೆಗೆ ಕೇಂದ್ರ ಸರ್ಕಾರ ನೀಡುವ ಪಾಲನ್ನು ಹೆಚ್ಚಿಸುವಂತೆ ಒತ್ತಾಯಿಸುವ ಕೆಲಸವನ್ನು ಬಿಜೆಪಿ ಮತ್ತು ಜೆಡಿ(ಎಸ್) ಮಾಡಲಿ ಎಂದು ಸಲಹೆ ನೀಡಿದರು.
"ಕೇಂದ್ರ ಸರ್ಕಾರವು ಈ ಯೋಜನೆಗೆ ನೀಡುವ ತನ್ನ ಪಾಲನ್ನು ಇಲ್ಲಿಯವರೆಗೆ ಒಂದು ರೂಪಾಯಿಯಷ್ಟೂ ಹೆಚ್ಚಿಸಿಲ್ಲ. ಈ ವಿಷಯದ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರಿಗೆ ಯಾವುದೇ ನೈತಿಕ ಹಕ್ಕಿಲ್ಲ. ಗೌರವಧನದಲ್ಲಿ ಏರಿಕೆಯಾಗಿದ್ದರೆ, ಅದು ನಮ್ಮ ಸರ್ಕಾರದಿಂದಲೇ ಆಗಿದೆ. ಆಶಾ ಕಾರ್ಯಕರ್ತೆಯರಿಂದ ತಮಗೆ ಹಲವು ಸಂದೇಶಗಳು ಬರುತ್ತಿದ್ದು, ಅವರು ಕರ್ತವ್ಯಕ್ಕೆ ಮರಳಲು ಸಿದ್ಧರಿದ್ದಾರೆ ಹಾಗೂ ತಮ್ಮ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.
ಆಶಾ ಕಾರ್ಯಕರ್ತೆಯರು ತನ್ನ ಸ್ವಂತ ಮಕ್ಕಳು ಮತ್ತು ಸಹೋದರಿಯರಿದ್ದಂತೆ ಎಂದು ಹೇಳಿದ ಮುಖ್ಯಮಂತ್ರಿಗಳು, ಅವರ ಕಲ್ಯಾಣದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



