ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್; ಕ್ಲೀನ್‌ಚಿಟ್ ನೀಡಿ ಸಾಕ್ಷಿಯನ್ನಾಗಿಸಿದ SIT..!

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್; ಕ್ಲೀನ್‌ಚಿಟ್ ನೀಡಿ ಸಾಕ್ಷಿಯನ್ನಾಗಿಸಿದ SIT..!
ಬಿ. ನಾಗೇಂದ್ರ
Published On :

ಬೆಂಗಳೂರು: 89.62 ಕೋಟಿ ರೂ. ಮೌಲ್ಯದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದಲ್ಲಿ ಅವರನ್ನು ಸಾಕ್ಷಿಯನ್ನಾಗಿ ಹೆಸರಿಸಿದೆ. ಈ ಮೂಲಕ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಿದಂತಾಗಿದೆ.

ಬುಧವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ಆರೋಪಪಟ್ಟಿಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಹಾಗೂ ನಿಗಮದ ಮಾಜಿ ಅಧ್ಯಕ್ಷ ಬಸನಗೌಡ ದದ್ದಲ್ ಅವರನ್ನೂ ಸಾಕ್ಷಿಯನ್ನಾಗಿ ಹೆಸರಿಸಲಾಗಿದೆ.

ಮೂಲಗಳ ಪ್ರಕಾರ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಹಾಗೂ ದದ್ದಲ್ ಅವರು ನಿಗಮದ ಹಣವನ್ನು ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಂಡಿಲ್ಲ ಮತ್ತು ಅವರ ವಿರುದ್ಧ ಯಾವುದೇ ಸಾಕ್ಷ್ಯಗಳು ಪತ್ತೆಯಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಇಬ್ಬರನ್ನೂ ಪ್ರಕರಣದ ಪ್ರಮುಖ ಸಾಕ್ಷಿಗಳೆಂದು ಗುರುತಿಸಲಾಗಿದೆ.

ರಾಜ್ಯದಲ್ಲಿ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಈ ಹಗರಣ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿತ್ತು.

ಪ್ರಕರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಮತ್ತೆ ಸ್ಥಾನ ಪಡೆದಿದ್ದ ಅವರು, ಪ್ರತಿಪಕ್ಷಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಚಿವ ಸ್ಥಾನದಿಂದ ಕೆಳಗಿಳಿದಿದ್ದರು.

ಏತನ್ಮಧ್ಯೆ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಿರುವುದನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಸಮರ್ಥಿಸಿಕೊಂಡಿದ್ದಾರೆ.

ರಾಜಕೀಯ ಹಸ್ತಕ್ಷೇಪದಿಂದ ಈ ನಿರ್ಧಾರ ಕೈಗೊಂಡಿಲ್ಲ, ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಿಗಮದ ಆಗಿನ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್, ನೆಕ್ಕುಂಟಿ ನಾಗರಾಜ್ ಹಾಗೂ ಹೈದರಾಬಾದ್ ಮೂಲದ ಉದ್ಯಮಿ ಸತ್ಯನಾರಾಯಣ ವರ್ಮಾ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ನಿಗಮದ ಹಣವನ್ನು ಹೂಡಿಕೆ ಮಾಡಿದರೆ ದುಪ್ಪಟ್ಟು ಮೊತ್ತ ನೀಡುವುದಾಗಿ ಆಮಿಷವೊಡ್ಡಿ, ನೆಕ್ಕುಂಟಿ ನಾಗರಾಜ್ ಮತ್ತು ಪರಶುರಾಮ್ ಒಳಸಂಚು ರೂಪಿಸಿ ಅಧಿಕಾರಿಗಳಿಂದ ಹಣ ವರ್ಗಾವಣೆ ಮಾಡಿಸಿದ್ದರು ಎಂದು ಸಿಐಡಿ ತಿಳಿಸಿದೆ. ಆದರೆ, ಈ ಅಕ್ರಮ ಹಣ ವರ್ಗಾವಣೆ ವಹಿವಾಟುಗಳ ಬಗ್ಗೆ ನಾಗೇಂದ್ರ ಅವರಿಗೆ ತಿಳಿದಿರಲಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ತಮ್ಮ ಆರೋಪಪಟ್ಟಿ ಹಾಗೂ ಪ್ರಾಸಿಕ್ಯೂಷನ್ ದೂರಿನಲ್ಲಿ ನಾಗೇಂದ್ರ ಅವರನ್ನೇ ಹಗರಣದ ಸೂತ್ರಧಾರ ಎಂದು ಆರೋಪಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.