ಹಾವೇರಿ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸರ ಹೆಸರು ಮರುನಾಮಕರಣ- ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಕಾಗಿನೆಲೆ: ಹಾವೇರಿಯ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ಮೆಡಿಕಲ್ ಕಾಲೇಜು ಎಂದು ಮರುನಾಮಕರಣ ಮಾಡಲಾಗುವುದು. ಆ ಮೂಲಕ ಕನಕದಾಸರ ಹೆಸರನ್ನು ಶಾಶ್ವತವಾಗಿ ಉಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಘೋಷಿಸಿದ್ದಾರೆ.
ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ನಿರಂಜನಾನಂದಪುರಿ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಭಕ್ತಶ್ರೇಷ್ಠ ಕನಕದಾಸರ ಜಯಂತ್ಯೋತ್ಸವ–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಕಾಗಿನೆಲೆ ಶ್ರೀಗಳ ಬೇಡಿಕೆಯಂತೆ ವಿದ್ಯಾರ್ಥಿ ನಿಲಯಕ್ಕೆ 5 ಕೋಟಿ ರೂ. ಅನುದಾನ ನೀಡಲಾಗುವುದು. ಭೂಮಿಯ ಕುರಿತು ನೀಡಲಾಗಿರುವ ಬೇಡಿಕೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಪ್ರವೇಶದಲ್ಲಿ 15% ಮೀಸಲಾತಿ ನೀಡಲಾಗುತ್ತಿತ್ತು. ಇದರಲ್ಲಿ 7.5% ಅನ್ನು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ನೀಡಲು ಸರ್ಕಾರ ತೀರ್ಮಾನಿಸಿದೆ. ಕನಕದಾಸರ ಕರ್ಮಭೂಮಿ ಕಾಗಿನೆಲೆಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿ. ಕನಕದಾಸರು ಮನುಕುಲದ ಆಸ್ತಿ. ನಾವು ಕೇವಲ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಷ್ಟೇ ಅಲ್ಲ, ಅವರ ಸಮಾನತೆಯ ತತ್ವವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕನಕ ಜಯಂತಿಯಂದು ಕನಕದಾಸರ ಐಕ್ಯ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸುವ ಭಾಗ್ಯ ಸಿಕ್ಕಿದೆ. ಕನಕದಾಸರು ಕೀರ್ತನೆಗಳ ಮೂಲಕ ಜಾತಿಯ ವಿಷಬೀಜ ಕಿತ್ತುಹಾಕಲು ಶ್ರಮಿಸಿದ ಮಹಾನ್ ಕ್ರಾಂತಿಕಾರಿ. ಕುಲದ ಹೆಸರಿನಲ್ಲಿ ತಾರತಮ್ಯ ಬೇಡ ಎಂದು ತಿಳಿಸಿದರು.
ಹಾವೇರಿ ಜಿಲ್ಲೆಯ 7 ಶಾಸಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಬ್ಯಾಡಗಿ ಕ್ಷೇತ್ರದ ಶಾಸಕರು ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆ ಮೂಲಕ 137 ಕೆರೆಗಳಿಗೆ ನೀರು ತುಂಬಿಸಲು ಅರ್ಜಿ ನೀಡಿದ್ದರು. ಅದಕ್ಕೆ ಈಗಾಗಲೇ 115 ಕೋಟಿ ರೂ. ಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಜಿಲ್ಲೆಯ ಇತರೆ ಶಾಸಕರು ತಮ್ಮ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ; ಆದರೆ ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ: CM DK ಶಿವಕುಮಾರ್
ಕಾಗಿನೆಲೆ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲು ಚಿಂತನೆ ನಡೆಸಲಾಗಿದೆ. ಶ್ರೀಗಳು ಅಧಿಕಾರಿಗಳ ವಿಚಾರ ಪ್ರಸ್ತಾಪಿಸಿದರು. ಅವರಿಗೆ ಯಾವ ರೀತಿ ನ್ಯಾಯ ಒದಗಿಸಲು ಸಾಧ್ಯ ಎಂಬುದರ ಕುರಿತು ಚಿಂತನೆ ನಡೆಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


