ರಾಜ್ಯ

ಬೇಡಿಕೆ ಹೆಚ್ಚಳ: GTTC ಸೀಟುಗಳ ಸಂಖ್ಯೆ 6 ಸಾವಿರಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

ಬೇಡಿಕೆ ಹೆಚ್ಚಳ: GTTC ಸೀಟುಗಳ ಸಂಖ್ಯೆ 6 ಸಾವಿರಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳ (GTTC) ಪ್ರವೇಶಾತಿ ಸೀಟುಗಳ ಸಂಖ್ಯೆಯನ್ನು ಈ ವರ್ಷ 2,500ರಿಂದ 6,000ಕ್ಕೆ ಹೆಚ್ಚಿಸಿದೆ.

ವಿದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಬಯಸುವ ವಿದ್ಯಾರ್ಥಿಗಳಿಗೆ ಜರ್ಮನ್ ಮತ್ತು ಜಪಾನ್ ಭಾಷೆಗಳನ್ನು ಕಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಪ್ರವೇಶಾತಿಗೆ ಹೆಚ್ಚಿನ ಬೇಡಿಕೆಯಿದೆ. ಕಳೆದ ವರ್ಷ ಎಲ್ಲ ಆಕಾಂಕ್ಷಿಗಳಿಗೂ ಪ್ರವೇಶ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸೀಟುಗಳ ಸಂಖ್ಯೆಯನ್ನು 2,500ರಿಂದ 6,000ಕ್ಕೆ ಹೆಚ್ಚಿಸಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ 34ಕ್ಕೂ ಹೆಚ್ಚು ಜಿಟಿಟಿಸಿ ಕೇಂದ್ರಗಳಿವೆ. ಜಿಟಿಟಿಸಿ ಕೇಂದ್ರಗಳಲ್ಲಿ ಶೇ.100ರಷ್ಟು ಉದ್ಯೋಗ ನಿಯೋಜನೆ ಆಗುತ್ತಿರುವುದರಿಂದ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

ಈ ಕೋರ್ಸ್‌ಗಳು ಕೌಶಲ್ಯಾಧಾರಿತವಾಗಿರುವುದರಿಂದ ಉದ್ಯೋಗಾವಕಾಶಗಳು ಹೆಚ್ಚಿವೆ. ಜಿಟಿಟಿಸಿ ಕೇಂದ್ರಗಳಲ್ಲಿ ಶೇ.100ರಷ್ಟು ಉದ್ಯೋಗ ನಿಯೋಜನೆ ಆಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಕೇಂದ್ರಗಳತ್ತ ಆಕರ್ಷಿತರಾಗುತ್ತಿದ್ದಾರೆ. ಜರ್ಮನಿ ಮತ್ತು ಜಪಾನ್ ದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಿರುವುದರಿಂದ ಅಲ್ಲಿನ ಭಾಷೆಗಳನ್ನೂ ಕಲಿಸಲಾಗುತ್ತಿದೆ ಎಂದು ವಿವರಿಸಿದರು.

ಈ ವರ್ಷ ಸುಮಾರು 10,000 ಅರ್ಜಿಗಳು ಬಂದಿದ್ದವು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಕೇಂದ್ರೀಕೃತ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ಸೀಟುಗಳನ್ನು ಭರ್ತಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ಜಿಟಿಟಿಸಿ ಕೇಂದ್ರಗಳಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್‌ಗಳ ಜೊತೆಗೆ ಅಲ್ಪಾವಧಿಯ ತರಬೇತಿ ಕೋರ್ಸ್‌ಗಳನ್ನೂ ನೀಡಲಾಗುತ್ತಿದೆ. ಪಠ್ಯಕ್ರಮದಲ್ಲಿ ಶೇ.60ರಷ್ಟು ಪ್ರಾಯೋಗಿಕ ತರಬೇತಿಗೆ ಆದ್ಯತೆ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.