ರಾಜ್ಯ

ಸರ್ಕಾರಿ ಶಾಲೆ ಖಾಲಿ ಹುದ್ದೆಗಳ ಭರ್ತಿಗೆ ಮುಹೂರ್ತ ಫಿಕ್ಸ್; ಜನವರಿಯೊಳಗೆ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚನೆ..!

ಸರ್ಕಾರಿ ಶಾಲೆ ಖಾಲಿ ಹುದ್ದೆಗಳ ಭರ್ತಿಗೆ ಮುಹೂರ್ತ ಫಿಕ್ಸ್; ಜನವರಿಯೊಳಗೆ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚನೆ..!
ಸಂಗ್ರಹ ಚಿತ್ರ
Published On :

ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರ ಮಹತ್ವದ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.

ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಮಾರ್ಚ್‌-ಏಪ್ರಿಲ್ ವೇಳೆಗೆ ನೇಮಕಾತಿ ಆದೇಶಗಳನ್ನು ನೀಡಬೇಕು. ಜೂನ್‌ನಲ್ಲಿ ಶೈಕ್ಷಣಿಕ ವರ್ಷ ಆರಂಭವಾಗುವ ಹೊತ್ತಿಗೆ ಹೊಸ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ಸಿದ್ಧರಿರಬೇಕು ಎಂದು ತಿಳಿಸಿದ್ದಾರೆ.

ನಿಗದಿತ ಗಡುವಿನೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೂ ಸಚಿವರು ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರನ್ನು ಹಳೆಯ ಪಿಂಚಣಿ ಯೋಜನೆಯ ವ್ಯಾಪ್ತಿಗೆ ತರುವ ಕುರಿತು ಚರ್ಚಿಸಲಾಯಿತು.

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಕಾಲ್ಪನಿಕ ವೇತನ ನೀಡುವ ಸಂಬಂಧ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಜಾರಿಗೊಳಿಸುವ ಬಗ್ಗೆಯೂ ಚರ್ಚೆ ನಡೆಯಿತು.

1998ರಿಂದ ಭರ್ತಿಯಾಗದೆ ಉಳಿದಿರುವ ಅನುದಾನಿತ ಪ್ರಾಥಮಿಕ ಶಾಲೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಲು ರಚಿಸಲಾಗಿರುವ ವಿಧಾನಮಂಡಲ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು.

ಪ್ರಾಥಮಿಕ ಶಾಲೆಗಳಿಂದ ಪ್ರೌಢಶಾಲೆ ಅಥವಾ ಪದವಿಪೂರ್ವ ಕಾಲೇಜುಗಳಿಗೆ ಬಡ್ತಿ ಪಡೆದ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ 15, 20 ಮತ್ತು 25 ವರ್ಷಗಳ ಸೇವೆಯ ಆಧಾರದ ಮೇಲೆ ನೀಡುವ ಕಾಲಮಿತಿ ಬಡ್ತಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಅಗತ್ಯದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಅನುದಾನರಹಿತ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೂ ಸರ್ಕಾರ ಒದಗಿಸುವ ಆರೋಗ್ಯ ವಿಮೆ ಸೌಲಭ್ಯ ವಿಸ್ತರಿಸುವಂತೆ ವಿಧಾನ ಪರಿಷತ್ ಸದಸ್ಯ ಎ.ಪಿ. ರಂಗನಾಥ್ ಅವರು ಸಚಿವ ಮಧು ಬಂಗಾರಪ್ಪ ಅವರನ್ನು ಒತ್ತಾಯಿಸಿದರು. ಈ ಕುರಿತು ಲಿಖಿತ ಪ್ರಸ್ತಾವನೆ ಸಲ್ಲಿಸುವಂತೆಯೂ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.