ರಾಜ್ಯ

ಕೆಜಿಎಫ್: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪಕ್ಕ ಪಾರ್ಸೆಲ್ ರೀತಿಯಲ್ಲಿ ಮಹಿಳೆಯ ಶವ ಪತ್ತೆ!

ಕೆಜಿಎಫ್: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪಕ್ಕ ಪಾರ್ಸೆಲ್ ರೀತಿಯಲ್ಲಿ ಮಹಿಳೆಯ ಶವ ಪತ್ತೆ!
ಮಹಿಳೆ ಶವ - ಎಸ್ಪಿ ಶಿವಾಂಶು ರಜಪೂತ್
Published On :

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯಲ್ಲಿ ಪಾರ್ಸೆಲ್ ರೀತಿಯಲ್ಲಿ ಮಹಿಳೆಯೊಬ್ಬರ ಶವ ಶುಕ್ರವಾರ ಪತ್ತೆಯಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬೇತಮಂಗಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ಮಹಿಳೆಯ ಗುರುತು ಪತ್ತೆ ಹಾಗೂ ದುಷ್ಕರ್ಮಿಗಳ ಬಂಧನಕ್ಕೆ ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಇಂದು ಬೆಳಗ್ಗೆ ಸುಂದರಪಾಳ್ಯ ಗ್ರಾಮದ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಸರ್ವೀಸ್ ರಸ್ತೆಯಲ್ಲಿ ಅನುಮಾನಾಸ್ಪದ ಪಾರ್ಸೆಲ್ ರೀತಿಯ ವಸ್ತುವೊಂದು ಕಂಡುಬಂದಿದೆ. ಅದರಿಂದ ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬೇತಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಅದರಲ್ಲಿ ಮಹಿಳೆಯ ಶವವಿರುವುದು ಪತ್ತೆಯಾಗಿದೆ.

ಸುಮಾರು 35 ರಿಂದ 40 ವರ್ಷ ವಯಸ್ಸಿನ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ದುಷ್ಕರ್ಮಿಗಳು, ಆಕೆಯ ಶವವನ್ನು ಕುಳಿತ ಸ್ಥಿತಿಯಲ್ಲಿ ಕೈಕಾಲು ಕಟ್ಟಿ ಗೋಣಿ ಚೀಲದಲ್ಲಿ ತುಂಬಿದ್ದಾರೆ. ನಂತರ ಅದಕ್ಕೆ ಪ್ಲಾಸ್ಟಿಕ್ ಕವರ್ ಮತ್ತು ಪಾರ್ಸೆಲ್ ಪ್ಲಾಸ್ಟರ್ ಸುತ್ತಿ, ಶವವನ್ನು ಸುಲಭವಾಗಿ ಎಳೆದುಕೊಂಡು ಹೋಗಲು ಅನುಕೂಲವಾಗುವಂತೆ ವಾಷಿಂಗ್ ಮಿಷನ್ ಟ್ರಾಲಿ ಮೇಲಿಟ್ಟು ಬಿಗಿಯಾಗಿ ಕಟ್ಟಿ ಬಿಸಾಡಿದ್ದಾರೆ. ಪಾರ್ಸೆಲ್ ಬಿಚ್ಚಿ ನೋಡಿದ ಪೊಲೀಸರು ಈ ದೃಶ್ಯ ಕಂಡು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕಾರಿನಲ್ಲಿ ಬಂದು ಶವ ಬಿಸಾಡಿ ಹೋಗಿರುವ ಸಾಧ್ಯತೆ ಇದ್ದು, ಹೆದ್ದಾರಿ ಟೋಲ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸುಂದರಪಾಳ್ಯ ಪ್ರದೇಶವು ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಗಳಿಗೆ ಹೊಂದಿಕೊಂಡಿರುವುದರಿಂದ, ಹೊರರಾಜ್ಯಗಳಿಂದಲೂ ಶವ ತಂದು ಎಸೆದಿರುವ ಸಾಧ್ಯತೆ ಇದ್ದು ಗಡಿ ಭಾಗದ ಪೊಲೀಸರಿಗೂ ಮಾಹಿತಿ ರವಾನಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.