'ಕಮಿಷನ್ ಕೊಟ್ಟರಷ್ಟೇ ಭೂಮಿ ಪೂಜೆಗೆ ಬರುವ MLA ಗಳು: ನವೆಂಬರ್ ಒಳಗೆ ಹಣ ಬಿಡುಗಡೆ ಮಾಡದಿದ್ದರೆ ಲಂಚ ತಿಂದ ಶಾಸಕರ ಹೆಸರು ಬಹಿರಂಗ'

ಮುಖ್ಯಮಂತ್ರಿ ಆದ ಬಳಿಕ ಡಿ.ಕೆ.ಶಿವಕುಮಾರ್, ಜೂ.30ರಂದು ನಡೆದ ಸಭೆಯಲ್ಲಿ ಬಾಕಿ ಬಿಲ್‍ಗಳಿಗೆ ಹಣ ಪಾವತಿಸುವುದಾಗಿ ಭರವಸೆ ಕೊಟ್ಟಿದ್ದರೂ ಇದುವರೆಗೆ ಈಡೇರಿಲ್ಲ.
R manjunath
ಆರ್. ಮಂಜುನಾಥ್
Updated on: 

ಬೆಂಗಳೂರು: ನವೆಂಬರ್ ಅಂತ್ಯದೊಳಗೆ ಕಾಮಗಾರಿ ನಿರ್ವಹಿಸಿರುವ ಬಾಕಿ ಬಿಲ್‍ಗಳಿಗೆ ಹಣ ಬಿಡುಗಡೆ ಮಾಡದಿದ್ದರೆ ಡಿಸೆಂಬರ್ ನಲ್ಲಿ ಲಂಚ ಪಡೆದಿರುವ ಶಾಸಕರ ಹೆಸರನ್ನು ಬಹಿರಂಗ ಪಡಿಸಿ ಅವರನ್ನು ದೇವರ ಮುಂದೆ ಪ್ರಮಾಣ ಮಾಡುವಂತೆ ಆಹ್ವಾನಿಸುವುದಾಗಿ ರಾಜ್ಯ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಸರಕಾರದ ವಿವಿಧ ಇಲಾಖೆಗಳಿಂದ ಅಂದಾಜು 37,970 ಸಾವಿರ ಕೋಟಿ ರೂ. ಬಾಕಿ ಬಿಲ್‍ಗಳಿವೆ. ಗುತ್ತಿಗೆದಾರರ ಸಂಘದ ಕೆಂಪಣ್ಣ ಅವರ ಹೆಸರನ್ನು ಬಳಸಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಮಗೆ ಸಹಾಯ ಮಾಡಲಿಲ್ಲ. ಅಂದಿನ ಡಿಸಿಎಂ ಆಗಿದ್ದ ಡಿ.ಕೆ.ಶಿವಕುಮಾರ್, ಫ್ರೀಡಂಪಾರ್ಕ್‍ನಲ್ಲಿ ನಡೆಸಿದ್ದ ಪ್ರತಿಭಟನಾ ಸ್ಥಳಕ್ಕೆ ಬಂದು ಒಂದೇ ಕಂತಿನಲ್ಲಿ ಹಣ ಬಿಡುಗಡೆ ಮಾಡುವುದಾಗಿ ಆಶ್ವಾಸನೆ ಕೊಟ್ಟಿದ್ದರು ಎಂದರು.

ಮುಖ್ಯಮಂತ್ರಿ ಆದ ಬಳಿಕ ಡಿ.ಕೆ.ಶಿವಕುಮಾರ್, ಜೂ.30ರಂದು ನಡೆದ ಸಭೆಯಲ್ಲಿ ಬಾಕಿ ಬಿಲ್‍ಗಳಿಗೆ ಹಣ ಪಾವತಿಸುವುದಾಗಿ ಭರವಸೆ ಕೊಟ್ಟಿದ್ದರೂ ಇದುವರೆಗೆ ಈಡೇರಿಲ್ಲ. ಹಾಗಾಗಿ, ನಮ್ಮ ಸಮಸ್ಯೆಗಳು ಬಗೆಹರಿಯದಿದ್ದರೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಆರ್.ಮಂಜುನಾಥ್ ಎಚ್ಚರಿಕೆ ನೀಡಿದರು.

ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಕಮಿಷನ್ ದಂಧೆ ಹೆಚ್ಚಳವಾಗಿದೆ. ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಪಾವತಿಸಲಾಗುತ್ತಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶೇ.75ರಷ್ಟು ಶಾಸಕರು, ಟೆಂಡರ್ ಗಳಲ್ಲಿ ಮೂಗು ತೂರಿಸುತ್ತಿದ್ದಾರೆ. ಅನುದಾನ ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಟೆಂಡರ್ ನಡೆಸಬಾರದು.

ಕೂಡಲೇ ಕಾಂಟ್ರಾಕ್ಟ್ ಮ್ಯಾನೇಜ್‍ಮೆಂಟ್(ಒಪ್ಪಂದ ನಿರ್ವಹಣೆ) ರದ್ದುಗೊಳಿಸಬೇಕು. 4 ವರ್ಷದಿಂದ ಬಾಕಿ ಬಿಲ್‍ಗಳಿಗೆ ಹಣ ಬಿಡುಗಡೆ ಆಗದ ಹಿನ್ನೆಲೆಯಲ್ಲಿ 1.5 ಲಕ್ಷ ಗುತ್ತಿಗೆದಾರರು ಪರದಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಣ ಬಿಡುಗಡೆಯಾಗದಿದ್ದರೆ ವಿಷ ಕುಡಿಯುವ ಪರಿಸ್ಥಿತಿ ಇದೆ ಎಂದು ಆರ್.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರದ ಸಚಿವರಿಗೆ, ಶಾಸಕರಿಗೆ ಕಮಿಷನ್ ನೀಡಬೇಕಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವ ಶಾಸಕರು, ತಮಗೆ ಬೇಕಾದವರಿಗೆ ಟೆಂಡರ್ ಕೊಡಿಸುತ್ತಿದ್ದಾರೆ. ನಿಯಮ ಉಲ್ಲಂಘಿಸಿ ಟೆಂಡರ್ ಪ್ರಕ್ರಿಯೆಗಳು ನಡೆಯುತ್ತಿವೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಕಮಿಷನ್ ಕೊಟ್ಟರಷ್ಟೇ ಶಾಸಕರು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಬರುತ್ತಾರೆ ಎಂದು ಆರ್.ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com