

ಮಾಗಡಿ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಪಸಾಗರ ಮತ್ತು ಕೊಂಡಹಳ್ಳಿ ಗ್ರಾಮಗಳ ನಡುವೆ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಬೋರಯ್ಯ(ಬುಸಿಯಪ್ಪ) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅತಿ ವೇಗವಾಗಿ ಚಲಿಸುತ್ತಿದ್ದ ಆಟೋಗೆ ದಿಢೀರ್ ಹಸುವೊಂದು ಅಡ್ಡ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪರಿಣಾಮ ಬೋರಯ್ಯ(65) ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪುತ್ರ ಹಾಗೂ ಪತ್ರಕರ್ತ ನಾಗರಾಜ್ ಹಾಗೂ ಇಬ್ಬರು ಮಕ್ಕಳು ಸೇರಿದಂತೆ 13 ಜನ ಗಾಯಗೊಂಡಿದ್ದಾರೆ. ಆಟೋದಲ್ಲಿ ಒಟ್ಟು 14 ಜನ ಪ್ರಯಾಣಿಕರಿದ್ದರು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಾಗಡಿ ಪೊಲೀಸರು ಪರಿಶೀಲನೆ ನಡೆಸಿ, ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ನಂತರ ಬೋರಯ್ಯ ಅವರ ಸ್ವಗ್ರಾಮ ಅರಳೆಮರದ ದೊಡ್ಡಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಮೃತ ಬೋರಯ್ಯ ಅವರು ಈ ಹಿಂದೆ ಸೀಗೆಕುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು. ಬೋರಯ್ಯ ಅವರ ಅಗಲಿಕೆಗೆ ಅರಳೆಮರದೊಡ್ಡಿ, ಸೀಗೆಕುಪ್ಪೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.