

ಹೈದರಾಬಾದ್: ಬೆಂಗಳೂರಿನ ಟೆಕ್ಕಿಯೊಬ್ಬರು ಅಪಾರ್ಟ್‌ಮೆಂಟ್ ಸಂಕೀರ್ಣವೊಂದರ 30ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ರಾತ್ರಿ ನಾನಕ್‌ರಾಮ್‌ಗುಡಾ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, 29 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಭರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ಐಟಿ (IT) ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್, ತನ್ನ ಸ್ನೇಹಿತನನ್ನು ಭೇಟಿಯಾಗಲು ಹೈದರಾಬಾದ್‌ಗೆ ಬಂದಿದ್ದರು. ಸ್ನೇಹಿತನ ಅಪಾರ್ಟ್‌ಮೆಂಟ್‌ನಲ್ಲಿ ಉಳಿದುಕೊಂಡಿದ್ದರು ಎಂದು ಗಚಿಬೌಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಅಪಾರ್ಟ್ಮೆಂಟ್‌ನ 30ನೇ ಮಹಡಿಯಿಂದ ಭರತ್ ಜಿಗಿದಿದ್ದು, ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ವಾಹನದ ಮೇಲೆ ಬಿದ್ದು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಭರತ್ ಬರೆದಿದ್ದಾನೆ ಎನ್ನಲಾದ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಂದೆ, ತಾಯಿಗೆ ಕ್ಷಮೆಯಾಚಿಸಿದ್ದಾನೆ. ಆದರೆ, ಸಾವಿಗೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.