

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಾಲೂರು ಬಿಜೆಪಿ ಮುಖಂಡ ಹಾಗೂ ಬಳಕಾಲೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಕುಮಾರ್ (50) ಮೃತಪಟ್ಟಿದ್ದಾರೆ.
ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹೊಸಕೋಟೆ-ದಾಬಸ್ಪೇಟೆಯ ರಿಂಗ್ ರಸ್ತೆಯ ಹೆದ್ದಾರಿಯಲ್ಲಿ ಓವರ್ಟೇಕ್ ಮಾಡುವ ಭರದಲ್ಲಿ, ಮುಂದೆ ಸಾಗುತ್ತಿದ್ದ ಗ್ಯಾಸ್ ಲಾರಿಗೆ ರೇಂಜ್ ರೋವರ್ ಕಾರು ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ರೇಂಜ್ ರೋವರ್ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
50 ವರ್ಷದ ಶಿವಕುಮಾರ್ ಅವರು ಮುಂಬರುವ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಟಿಕೆಟ್ ಪಡೆಯುವ ಆಕಾಂಕ್ಷೆ ಹೊಂದಿದ್ದರು ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.