ಕಬ್ಬು ಬೆಳೆಗಾರರ ಬೇಡಿಕೆ: ಇಂದು ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಸಭೆ

ರೈತರು ಮಂಗಳವಾರದಿಂದ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್, ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್‌ಪ್ಲಾಜಾ ಹಾಗೂ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್‌ಪ್ಲಾಜಾ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ತಡೆ ನಡೆಸಿದ್ದರು.
CM D K Shivakumar
ಸಿಎಂ ಡಿ ಕೆ ಶಿವಕುಮಾರ್
Updated on: 

ಬೆಳಗಾವಿ: ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಬೆಂಬಲಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ಕಚೇರಿಗೆ ಮುತ್ತಿಗೆ ಹಾಕಲು ಹುಬ್ಬಳ್ಳಿಯತ್ತ ಹಮ್ಮಿಕೊಂಡಿರುವ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಶನಿವಾರ ಅಪರಾಹ್ನ ಚನ್ನಮ್ಮ ಕಿತ್ತೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಮಂಗಳವಾರದಿಂದ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್, ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್‌ಪ್ಲಾಜಾ ಹಾಗೂ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್‌ಪ್ಲಾಜಾ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ತಡೆ ನಡೆಸಿದ್ದರು. ಇದರಿಂದ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

CM D K Shivakumar
Watch | ಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ; ಪ್ರಲ್ಹಾದ್ ಜೋಶಿ ಹೇಳಿದ್ದಿಷ್ಟು...

ಕೇಂದ್ರ ಸರ್ಕಾರದಿಂದ ತಮ್ಮ ಬೇಡಿಕೆಗಳಿಗೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರೈತರು ಬುಧವಾರ ಸಂಜೆ ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್‌ಪ್ಲಾಜಾದಿಂದ ಪಾದಯಾತ್ರೆ ಆರಂಭಿಸಿದ್ದರು. ಎರಡು ದಿನಗಳ ಬಳಿಕ ಪಾದಯಾತ್ರೆ ಬೆಳಗಾವಿ ತಾಲ್ಲೂಕಿನ ಸುವರ್ಣ ವಿಧಾನಸೌಧದ ಸಮೀಪ ತಲುಪಿತ್ತು.

ನಿನ್ನೆ ಶುಕ್ರವಾರ ಮೂರನೇ ದಿನದ ಪಾದಯಾತ್ರೆ ಚನ್ನಮ್ಮ ಕಿತ್ತೂರು ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿ ಕಡೆಗೆ ಮುಂದುವರಿದಿತ್ತು. ನಾಲ್ಕನೇ ದಿನವಾದ ಇಂದು ರೈತರು ಚನ್ನಮ್ಮ ಕಿತ್ತೂರು ಪಟ್ಟಣದತ್ತ ಪಾದಯಾತ್ರೆ ನಡೆಸುತ್ತಿದ್ದಾರೆ.

ರೈತರ ಬೇಡಿಕೆಗಳೇನು?

ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿಯಿಂದ 6,000 ರೂ. ಬೆಲೆ ನಿಗದಿಪಡಿಸಬೇಕು, ಸಕ್ಕರೆ ಕಾರ್ಖಾನೆಗಳ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು 31 ರೂಗಳಿಂದ 60ರೂಪಾಯಿಗೆ ಹೆಚ್ಚಿಸಬೇಕು, ಸಕ್ಕರೆ ಕಾರ್ಖಾನೆಗಳಲ್ಲಿ ಉತ್ಪಾದನೆಯಾಗುವ ಎಥೆನಾಲ್ ನ್ನು ಯಾವುದೇ ತಾರತಮ್ಯವಿಲ್ಲದೆ ಸಂಪೂರ್ಣವಾಗಿ ಖರೀದಿಸಬೇಕು, ಕೇಂದ್ರ ಸರ್ಕಾರ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು (FRP) ಹೆಚ್ಚಿಸಬೇಕು ಹಾಗೂ ಎಂ.ಎಸ್. ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ.

ರೈತರ ಬೇಡಿಕೆಗಳನ್ನು ಪುನರುಚ್ಚರಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜೇರಿ, ವಿಳಂಬ ಮಾಡಿದ್ದಕ್ಕಾಗಿ ಪ್ರಲ್ಹಾದ್ ಜೋಶಿ ಕ್ಷಮೆಯಾಚಿಸಬೇಕು ಮತ್ತು ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 1,000 ಬೆಂಬಲ ಬೆಲೆ ನೀಡಬೇಕೆಂಬ ಬೇಡಿಕೆಯ ಕುರಿತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೂಡ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ಸಂಜೆ 4.15ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಚನ್ನಮ್ಮ ಕಿತ್ತೂರಿಗೆ ತೆರಳಲಿದ್ದಾರೆ. ಸಂಜೆ 5 ಗಂಟೆಗೆ ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

X
Kannada Prabha
www.kannadaprabha.com