

ಬೆಂಗಳೂರು: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಕೇಶ್ವಾಪುರದ ಮಯೂರಿ ಎಸ್ಟೇಟ್ ನಿವಾಸಿಗಳ ಜೀವ ಮತ್ತು ಆಸ್ತಿಗೆ ಯಾವುದೇ ಅಪಾಯ ಎದುರಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಹಾಗೂ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಈ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಕೆ.ಎಸ್.ಭರತ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ನಿರ್ದೇಶಿಸಿದೆ.
ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುವ ಪ್ರತಿಭಟನೆ, ರ್ಯಾಲಿ, ಮೆರವಣಿಗೆ, ಧರಣಿ ಅಥವಾ ಮುತ್ತಿಗೆ ಕಾರ್ಯಕ್ರಮಗಳನ್ನು ಅಧಿಕಾರಿಗಳು ನಿಗದಿಪಡಿಸಿದ ಸ್ಥಳಗಳಲ್ಲೇ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಂಗಮ್ನಾಥ್ ಹಂಜಿ ಸೇರಿದಂತೆ ಎಂಟು ಮಂದಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
2022ರ ಆಗಸ್ಟ್ 1ರಂದು ಹೈಕೋರ್ಟ್ ನೀಡಿದ್ದ ಆದೇಶದ ಪ್ರಕಾರ ಪ್ರತಿಭಟನೆಗಳು ನಡೆಯಬೇಕು ಮತ್ತು ಮಯೂರಿ ಎಸ್ಟೇಟ್ನಂತಹ ವಸತಿ ಪ್ರದೇಶಗಳಲ್ಲಿ ಅವುಗಳಿಗೆ ಅವಕಾಶ ನೀಡಬಾರದು ಎಂದು ಅರ್ಜಿದಾರರು ಕೋರಿದ್ದರು.
ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ವಾದ ಮಂಡಿಸಿ, ವಸತಿ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದ ನಿವಾಸಿಗಳ ಸಂವಿಧಾನದ 19(1)(ಡಿ) ಮತ್ತು 21ನೇ ವಿಧಿಗಳ ಅಡಿಯಲ್ಲಿ ದೊರೆಯುವ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್, ನಿವಾಸಿಗಳ ಜೀವ ಮತ್ತು ಆಸ್ತಿಯ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರತಿಭಟನೆಗಳನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಅಧಿಕಾರಿಗಳು ಅರ್ಜಿದಾರರ ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ ಹೈಕೋರ್ಟ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಲೇವಾರಿ ಮಾಡಿದೆ.