

ಬೆಳಗಾವಿ: ಕಬ್ಬು ಬೆಂಬಲ ಬೆಲೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಉತ್ತರ ಕರ್ನಾಟಕದ ರೈತರು ಈಗ ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.
ಅಕ್ಟೋಬರ್ 26 ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರ ಡಿಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಗೂ ಮುನ್ನ ರೈತ ಸಂಘಟನೆಗಳು ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಇವುಗಳು ಈಡೇರದಿದ್ದರೆ ಅಕ್ಟೋಬರ್ 27 ರಂದು ರಾಜ್ಯಾದ್ಯಂತ ಬಂದ್ ಆಚರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರೈತ ಸಂಘ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಪ್ರೇಮ್ ಚೌಗಲಾ ಅವರು, ಮುಖ್ಯಮಂತ್ರಿ ಅವರೊಂದಿಗಿನ ಸಭೆಯಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬ ನಿರೀಕ್ಷೆಯಿದೆ. ಸಭೆಯಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ರೂ.1,000 ಬೆಂಬಲ ಬೆಲೆ ನೀಡಬೇಕು, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ರೂ.4,500 ಪಾವತಿಸಬೇಕು ಹಾಗೂ ಕಬ್ಬಿನ ತೂಕ ಮಾಡುವಾಗ ಕಸ ಅಥವಾ ಕೆಸರು ಇದೆ ಎಂಬ ಕಾರಣ ನೀಡಿ ಹಣ ಕಡಿತಗೊಳಿಸುವ ಅಕ್ರಮ ಪದ್ಧತಿಯನ್ನು ತಡೆಯಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ ಎಂದು ತಿಳಿಸಿದರು.
ಇದೇ ವೇಳೆ ಈ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಅಕ್ಟೋಬರ್ 27ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮೊದಲು ಅಕ್ಟೋಬರ್ 17ರಂದು ರಾಜ್ಯದ ಕಬ್ಬು ಬೆಳೆಯುವ ಜಿಲ್ಲೆಗಳ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ಈ ನಡುವೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ರೈತರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವುದಾಗಿ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳು ಭರವಸೆ ನೀಡಿವೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ರೈತರು ಕಳೆದ ಮೂರು ದಿನಗಳಿಂದ ತಮ್ಮ ಸಮಸ್ಯೆಗಳ ಕುರಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕೆ.ಜಿ.ಗೆ ರೂ.60ಕ್ಕೆ ಹೆಚ್ಚಿಸಬೇಕು ಎಂಬುದು ರೈತರ ಮೊದಲ ಬೇಡಿಕೆಯಾಗಿದೆ. ಈ ವಿಷಯದಲ್ಲಿ ಸರ್ಕಾರದೊಂದಿಗೆ ಚರ್ಚೆ ನಡೆಸಲು ರೈತರು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ಇದಲ್ಲದೆ, ಕರ್ನಾಟಕಕ್ಕೆ ತೈಲ ಮಾರುಕಟ್ಟೆ ಕಂಪನಿಗಳಿಂದ ಶೇ.100ರಷ್ಟು ಎಥನಾಲ್ ಹಂಚಿಕೆ ಮಾಡಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.
ಕಳೆದ ವರ್ಷ ರಾಜ್ಯಕ್ಕೆ ಶೇ.30ರಿಂದ 40ರಷ್ಟು ಮಾತ್ರ ಹಂಚಿಕೆ ಮಾಡಲಾಗಿತ್ತು. ಇದರಿಂದ ಹಲವು ಎಥನಾಲ್ ಮತ್ತು ಸಕ್ಕರೆ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗದೆ, ಹಣದ ಹರಿವಿನ ಸಮಸ್ಯೆ ಎದುರಿಸಿದ್ದವು. ಪರಿಣಾಮವಾಗಿ ರೈತರಿಗೆ ಹಣ ಪಾವತಿಸುವುದರ ಮೇಲೂ ಪರಿಣಾಮ ಬೀರಿತ್ತು. ಈ ಬೇಡಿಕೆ ಈಡೇರಿದರೆ ಮೆಕ್ಕೆಜೋಳ ಬೆಳೆಗಾರರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ..
ದೇಶೀಯ ಬಳಕೆಯ ಸಕ್ಕರೆ ಮತ್ತು ವಾಣಿಜ್ಯ ಬಳಕೆಯ ಸಕ್ಕರೆಗೆ ಪ್ರತ್ಯೇಕ ಬೆಲೆ ನಿಗದಿಪಡಿಸಬೇಕು ಹಾಗೂ ವಾಣಿಜ್ಯ ಸಕ್ಕರೆಗೆ ಹೆಚ್ಚಿನ ಬೆಲೆ ನೀಡಬೇಕು ಎಂಬುದು ರೈತರ ಮೂರನೇ ಬೇಡಿಕೆಯಾಗಿದೆ. ಇದರಿಂದ ಸಕ್ಕರೆ ಕಾರ್ಖಾನೆಗಳು ಮತ್ತು ರೈತರಿಗೆ ಉತ್ತಮ ಆದಾಯ ದೊರೆಯಲಿದೆ ಎಂಬುದು ಅವರ ಅಭಿಪ್ರಾಯವಾಗಿದೆ.
ಇದೇ ವೇಳೆ ರೈತರೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿಗಳ ಕಚೇರಿಗಳನ್ನೂ ಸಂಪರ್ಕಿಸಲಾಗಿದೆ. ರೈತರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ಎರಡೂ ಸರ್ಕಾರಗಳು ನೀಡಿವೆ, ಪ್ರತಿಭಟನಾಕಾರರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.