ಐಟಿ ಕಂಪೆನಿಗಳು ಕನ್ನಡಿಗರನ್ನು ಕಡೆಗಣಿಸಿದರೆ ಕಠಿಣ ಕ್ರಮ: CM ಡಿ ಕೆ ಶಿವಕುಮಾರ್ ಎಚ್ಚರಿಕೆ

ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡು, ಬೆಂಗಳೂರಿನ ಕೆಲವು ಖಾಸಗಿ ಐಟಿ ಕಂಪನಿಗಳು ಕನ್ನಡ ಮಾತನಾಡುವ ಉದ್ಯೋಗಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ವಿರುದ್ಧ ತಾರತಮ್ಯ ಎಸಗುತ್ತಿವೆ ಎಂದು ಆರೋಪಿಸಿದ್ದಾರೆ.
D K Shivakumar
ಡಿ ಕೆ ಶಿವಕುಮಾರ್
Updated on: 

ಬೆಂಗಳೂರು: ದೇಶದ ಐಟಿ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ಕೆಲವು ಮಾಹಿತಿ ತಂತ್ರಜ್ಞಾನ (IT) ಕಂಪನಿಗಳಲ್ಲಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳ ವಿರುದ್ಧ ತಾರತಮ್ಯ ಎಸಗಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕನ್ನಡವನ್ನು ಮಾತೃಭಾಷೆಯಾಗಿ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ನಿರಾಕರಿಸಲಾಗುತ್ತಿದೆ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದು, ಬೆಂಗಳೂರಿನ ಕೆಲವು ಖಾಸಗಿ ಐಟಿ ಕಂಪನಿಗಳು ಕನ್ನಡ ಮಾತನಾಡುವ ಉದ್ಯೋಗಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ವಿರುದ್ಧ ತಾರತಮ್ಯ ಎಸಗುತ್ತಿವೆ ಎಂದು ಆರೋಪಿಸಿದ್ದಾರೆ.

ಹೊರ ರಾಜ್ಯಗಳ ಅಭ್ಯರ್ಥಿಗಳಿಗೆ ಉದ್ಯೋಗ ನೀಡುತ್ತಿರುವ ಕೆಲವು ಕಂಪನಿಗಳು, ಕನ್ನಡಿಗ ಅಭ್ಯರ್ಥಿಗಳನ್ನು ಮಾತ್ರ ತಿರಸ್ಕರಿಸುತ್ತಿವೆ ಎಂದು ಅವರು ದೂರಿದ್ದಾರೆ. ಈ ಆರೋಪಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಾರತಮ್ಯ ಎಸಗುವ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರು ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯ ಎದುರಿಸುತ್ತಿದ್ದಾರೆ ಎಂಬ ವಿಷಯ ತಿಳಿದು ನೋವಾಗಿದೆ. ಸ್ಥಳೀಯ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸಲಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗರಿಗೇ ಅಗ್ರಸ್ಥಾನ

ಕರ್ನಾಟಕದಲ್ಲಿ ಕನ್ನಡಿಗರಿಗೇ ಅಗ್ರಸ್ಥಾನ. ಯಾವುದೇ ಕಾರಣಕ್ಕೂ ಕನ್ನಡಿಗರ ಹಕ್ಕುಗಳು, ಗೌರವ ಹಾಗೂ ಅವಕಾಶಗಳನ್ನು ಕಡೆಗಣಿಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ವಿಶ್ವವೇ ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದೆ. ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಹಾಗೂ ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ ಎಂದು ಅವರು ಹೇಳಿದ್ದಾರೆ.

ಐಟಿ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ಯಾವುದೇ ಖಾಸಗಿ ಸಂಸ್ಥೆಯು ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸುತ್ತಿರುವುದು ಕಂಡುಬಂದರೆ, ಅಂತಹ ಸಂಸ್ಥೆಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.

ಕನ್ನಡಿಗರ ಹಿತಾಸಕ್ತಿಗಳ ಪರವಾಗಿ ಧ್ವನಿ ಎತ್ತುವ ಸರ್ಕಾರವು ಅವರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಯುವತಿ ಆರೋಪ

ಇತ್ತೀಚೆಗೆ ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದು, ಉದ್ಯೋಗಾಕಾಂಕ್ಷಿಗಳು ತಮ್ಮ ಬಯೋಡೇಟಾದಲ್ಲಿ ಮಾತೃಭಾಷೆ ಕನ್ನಡ ಎಂದು ನಮೂದಿಸಿದರೆ ಅವರಿಗೆ ಉದ್ಯೋಗ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನ ಕೆಲವು ಕಂಪನಿಗಳು ಬೆರಳೆಣಿಕೆಯಷ್ಟು ಕನ್ನಡಿಗರಿಗೆ ಮಾತ್ರ ಉದ್ಯೋಗ ನೀಡುತ್ತಿವೆ. ಬದಲಾಗಿ ಹೊರರಾಜ್ಯಗಳಲ್ಲಿ ಕ್ಯಾಂಪಸ್ ಸಂದರ್ಶನಗಳನ್ನು ನಡೆಸಿ ಕಡಿಮೆ ವೇತನಕ್ಕೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುತ್ತಿವೆ ಎಂದು ಅವರು ದೂರಿದ್ದಾರೆ.

ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ ಎಂದು ಯುವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಸ್ಥೆನೋಸ್ ಟೆಕ್ನಾಲಜೀಸ್ ಕಂಪನಿ ವಿರುದ್ಧ ಆರೋಪ

ಯುವತಿಯು ತಮ್ಮ ವಿಡಿಯೊದಲ್ಲಿ ಅಸ್ಥೆನೋಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ (Asthenos Technologies Private Limited) ಕಂಪನಿಯ ಹೆಸರನ್ನು ಉಲ್ಲೇಖಿಸಿದ್ದಾರೆ.

ಈ ಕಂಪನಿಯಲ್ಲಿ ತಮಿಳು ಮತ್ತು ತೆಲುಗು ಭಾಷೆಗಳಿಗೆ ಮಾನ್ಯತೆ ನೀಡುತ್ತಿದೆ. ಆದರೆ, ಕನ್ನಡ ಮಾತನಾಡುವ ಅಭ್ಯರ್ಥಿಗಳಿಗೆ ಅದೇ ರೀತಿಯ ಆದ್ಯತೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಅಭ್ಯರ್ಥಿಗಳು ತಮ್ಮ ಬಯೋಡೇಟಾದಲ್ಲಿ ಮಾತೃಭಾಷೆ ಕನ್ನಡ ಎಂದು ನಮೂದಿಸಿದರೆ, ಸಂದರ್ಶನದ ಹಂತದಲ್ಲಿಯೇ ಅವರನ್ನು ತಿರಸ್ಕರಿಸುವ ಸಾಧ್ಯತೆಯಿದೆ ಎಂದು ಯುವತಿ ದೂರಿದ್ದಾರೆ.

ಇದಲ್ಲದೆ, ಬೆಂಗಳೂರಿನ ಕಾಲೇಜುಗಳಲ್ಲಿ ಕ್ಯಾಂಪಸ್ ನೇಮಕಾತಿ ಅಭಿಯಾನಗಳನ್ನು ನಡೆಸುತ್ತಿಲ್ಲ. ಇದರಿಂದ ಸ್ಥಳೀಯ ಪದವೀಧರರಿಗೆ ಉದ್ಯೋಗಾವಕಾಶಗಳು ಸೀಮಿತವಾಗಿವೆ ಎಂದು ಅವರು ಆರೋಪಿಸಿದ್ದಾರೆ.

ಈ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಧ್ಯಪ್ರವೇಶಿಸಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಯುವತಿ ವಿಡಿಯೊ ಮೂಲಕ ಮನವಿ ಮಾಡಿದ್ದಾರೆ.

D K Shivakumar
ಮಾತೃಭಾಷೆ ಕನ್ನಡ ಅಂದ್ರೆ ಕೆಲಸ ಕೊಡಲ್ಲ, ಬೆಂಗಳೂರಿನ ಐಟಿ ಕಂಪನಿಗೆ ಕನ್ನಡ ಬೇಡ್ವಂತೆ: ವಿಡಿಯೋ ಮೂಲಕ ನೋವು ಹೇಳಿಕೊಂಡ ಯುವತಿ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com