

ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಸಿಗುತ್ತಿಲ್ಲ, ಮಾತೃಭಾಷೆ ಕನ್ನಡ ಎಂದು ಹೇಳಿದರೆ ನಮಗೆ ಕೆಲಸ ಸಿಗುವುದಿಲ್ಲ ಎಂದು ಯುವತಿಯೊಬ್ಬಳು ವಿಡಿಯೋ ಮಾಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಐಟಿ ಕಂಪನಿಗಳು ಕನ್ನಡಿಗರಿಗೆ ಅನ್ಯಾಯ ಮಾಡಬಾರದು ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಉದ್ಯಮಿ ಮೋಹನ್ ದಾಸ್ ಪೈ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ನಿಜ. ಆದರೆ ಉತ್ತಮ ಶಿಕ್ಷಣ, ಕೌಶಲ ತರಬೇತಿ ಮೊದಲು ಕೊಡಿ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಯುವಕರ ಉನ್ನತ ಶಿಕ್ಷಣದ ಬಗ್ಗೆ ಗಮನ ಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಒಟ್ಟು ದಾಖಲಾತಿ ಅನುಪಾತ (GER) ಕಡಿಮೆಯಿದೆ. ಅಲ್ಲಿನ ಯುವಕರಲ್ಲಿ ಸಾಫ್ಟ್ ಸ್ಕಿಲ್ಸ್ ಕೂಡ ಹೆಚ್ಚಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿಯುವಕರಿಗೆ ಉತ್ತಮ ತರಬೇತಿ ನೀಡುವ ಮೂಲಕ ಉದ್ಯೋಗಕ್ಕೆ ಅಗತ್ಯವಾದ ಕೌಶಲಗಳನ್ನು ಬೆಳೆಸಬೇಕು. ಸರ್ಕಾರಿ ಕಾಲೇಜುಗಳಲ್ಲಿ ಶೇ 60ರಿಂದ 70ಕ್ಕಿಂತ ಹೆಚ್ಚು ಬೋಧಕ ಸಿಬ್ಬಂದಿ ಅತಿಥಿ ಉಪನ್ಯಾಸಕರಾಗಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿರುವ ಪೈ, ಕಾಲೇಜುಗಳಲ್ಲಿ ಕಾಯಂ ಬೋಧಕ ಸಿಬ್ಬಂದಿಯನ್ನು ನೇಮಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ, ಕನ್ನಡಿಗರ ಹಕ್ಕು, ಗೌರವ ಮತ್ತು ಉದ್ಯೋಗಾವಕಾಶಗಳನ್ನು ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸಿರುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.