

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ(DRDO) 47 ವರ್ಷದ ಹಿರಿಯ ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರಣ ಘಟನೆ ನಡೆದಿದೆ.
ನಗರದ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಎಡಿಎ ಗ್ರೇಡ್ ಎಫ್‌ನ ವಿಜ್ಞಾನಿ ಶರದ್ ಕಟಿಯಾರ್(47) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶರದ್ ಅವರು ವಾಸವಾಗಿದ್ದ ನಾಲ್ಕನೇ ಅಂತಸ್ತಿನ ಅಪಾರ್ಟ್ಮೆಂಟ್ ಮೇಲಿಂದ ಜಿಗಿದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿಜ್ಞಾನಿ ಶರದ್ ಅವರು ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆತ್ಮಹತ್ಯೆ ದಿನವೂ ಕೂಡ ಚಿಕಿತ್ಸೆ ಪಡೆದು ಬಂದಿದ್ದರು. 21ರ ಸಂಜೆ 7:30ರ ಸುಮಾರಿಗೆ ಅಪಾರ್ಟ್ಮೆಂಟ್ ಮೇಲಿಂದ ಜಿಗಿದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಶರದ್ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕೆಲಸಕ್ಕೆ ಸಂಬಂಧಿಸಿದ ಒತ್ತಡದಿಂದಾಗಿ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಶರದ್ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.
ಈ ಸಂಬಂಧ ವೈಟ್‌ಫೀಲ್ಡ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.