

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಮಂಗಳವಾರ ಬೆಳಗ್ಗೆ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪರಮೇಶ್ವರ ಅವರಿಗೆ ಹೃದಯಾಘಾತವಾಗಿದೆ ಎಂಬ ಪ್ರಾಥಮಿಕ ಮಾಹಿತಿಗಳು ಹೊರಬಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಲವು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಡಿಸಿಎಂ ಆರೋಗ್ಯ ವಿಚಾರಿಸಿದ್ದಾರೆ.
ಇದರ ಬೆನ್ನಲ್ಲೇ ಆಸ್ಪತ್ರೆಯಿಂದಲೇ ತಮ್ಮ ಆರೋಗ್ಯದ ಕುರಿತು ‘ಎಕ್ಸ್’ (X) ಪೋಸ್ಟ್ ಮಾಡಿರುವ ಪರಮೇಶ್ವರ ಅವರು, ದೇವರ ದಯೆಯಿಂದ ನನ್ನ ಆರೋಗ್ಯ ಸ್ಥಿರವಾಗಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ವೇಳೆ ಹೃದಯಬಡಿತ ತುಸು ಹೆಚ್ಚಾದ ಕಾರಣ ತಕ್ಷಣವೇ ಆಸ್ಪತ್ರೆಗೆ ತೆರಳಿ ಅಗತ್ಯ ಚಿಕಿತ್ಸೆ ಪಡೆದಿದ್ದೇನೆ.
ನನ್ನ ಮೇಲಿನ ಕಾಳಜಿಯಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ಬಹಳಷ್ಟು ಮಂದಿ ಹಿತೈಷಿಗಳು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಹಲವರು ದೂರವಾಣಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ತಮ್ಮೆಲ್ಲರ ಪ್ರೀತಿ - ಕಾಳಜಿಗೆ ಧನ್ಯವಾದಗಳು.
ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೇವರ ದಯೆಯಿಂದ ನನ್ನ ಆರೋಗ್ಯವೀಗ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿರುವ ಇತರೆ ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ನನ್ನನ್ನು ಭೇಟಿ ಮಾಡಲು ದಯವಿಟ್ಟು ಆಸ್ಪತ್ರೆ ಬಳಿ ಬರಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಪರಮೇಶ್ವರ ಅವರು ಪೋಸ್ಟ್ ಮಾಡಿದ್ದಾರೆ.
ಇನ್ನು ಆಸ್ಪತ್ರೆಗೆ ಭೇಟಿ ನೀಡಿ ಪರಮೇಶ್ವರ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಅವರ ಬಿಪಿ ನಾರ್ಮಲ್ ಆಗಿದೆ ಹಾಗೂ ಅವರ ಹೃದಯಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.