

ಕೋಲಾರ: ನಗರದಲ್ಲಿ ಆರು ವರ್ಷದ ಬಾಲಕಿಯೊಂದಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದ ನಂತರ ಕೋಲಾರದಲ್ಲಿ ಸಾರ್ವಜನಿಕ ಆಕ್ರೋಶ ಭುಗಿಲೆದ್ದಿದೆ.
ಬುಧವಾರ ರಾತ್ರಿ ಪ್ರತಿಭಟನೆಗಳು ನಡೆದಿದ್ದು, ಸ್ಥಳೀಯರು ರಸ್ತೆ ತಡೆ ನಡೆಸಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಘಟನೆಯ ಸುದ್ದಿ ಹರಡಿದ ತಕ್ಷಣವೇ, ನೂರಾರು ಜನರು ಆಸ್ಪತ್ರೆ ಮತ್ತು ಪೊಲೀಸ್ ಠಾಣೆಯ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು ಹಾಗೂ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಉದ್ವಿಗ್ನತೆ ಹೆಚ್ಚಾದಂತೆ, ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ, ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಿವಾಸಿಗಳಿಗೆ ಭರವಸೆ ನೀಡಿದರು.
ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಂಶು ರಜಪೂತ್ ಕೂಡ ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ಪರಿಶೀಲಿಸಿದರು.
ಘಟನೆಯಲ್ಲಿ ಭಾಗಿಯಾಗಿದ್ದಾನೆಂಬ ಶಂಕೆಯ ಮೇರೆಗೆ ಪೊಲೀಸರು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯು ಆ ಪ್ರದೇಶದಲ್ಲಿ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳೀಯರು ತ್ವರಿತ ಕ್ರಮ ಹಾಗೂ ಮಗುವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ.