

ನವದೆಹಲಿ: 72 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ದೆಹಲಿಯ ಹೊರಗೆ ನಡೆಯಲಿದ್ದು, ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ವಿಶ್ವದ ಅತಿ ಎತ್ತರದ ಪ್ರತಿಮೆಯಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ()ಯನ್ನು ಹೊಂದಿರುವ ಏಕ್ತಾ ನಗರ ಎಂದು ಮರುನಾಮಕರಣಗೊಂಡಿರುವ ಕೆವಾಡಿಯಾದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ನಡೆಯಲಿದೆ. ಈ ಮೂಲಕ ದಶಕಗಳ ಸಂಪ್ರದಾಯಕ್ಕೆ ಬ್ರೇಕ್ ಹಾಕಲಾಗಿದೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ನಡೆಸುವುದು ಹಲವು ದಶಕಗಳ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. 1954 ರಲ್ಲಿ ಮೊದಲ ರಾಷ್ಟ್ರೀಯ ಪ್ರಶಸ್ತಿಗಳನ್ನು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಸಲಾಯಿತು. ಅಂದಿನಿಂದ ಇಲ್ಲಿಯವರೆಗೆ ಹೆಚ್ಚಿನ ಪ್ರಶಸ್ತಿ ಪ್ರದಾನ ಸಮಾರಂಭಗಳನ್ನು ಇಲ್ಲಿಯೇ ಆಯೋಜಿಸಲಾಗಿದೆ. ಸಾಮಾನ್ಯವಾಗಿ ರಾಷ್ಟ್ರಪತಿಯೇ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಾರೆ. ಇದೇ ಮೊದಲ ಬಾರಿ ದೆಹಲಿಯಿಂದ ಗುಜರಾತ್ ನ ಏಕ್ತಾ ನಗರಕ್ಕೆ ಸಮಾರಂಭವನ್ನು ಸ್ಥಳಾಂತರಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಈ ತಿಂಗಳ ಕೊನೆಯಲ್ಲಿ ಗುಜರಾತ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಭೇಟಿಯ ಸಂದರ್ಭದಲ್ಲಿ ಅವರು ಏಕ್ತಾ ನಗರಕ್ಕೆ ತೆರಳಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.