

ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರದಿದ್ದು, ಹಲವು ಕಡೆ ಮಂಗಳವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಇಂದು ಸಂಜೆ 6 ಗಂಟೆಯ ಸುಮಾರಿಗೆ ಆರಂಭವಾದ ಮಳೆ 7 ಗಂಟೆಯವರೆಗೂ ಸುರಿದಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.
ಭಾರೀ ಮಳೆಯಿಂದ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.
ಕೆಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್
ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.