

ಭಟ್ಕಳ: ಭಟ್ಕಳ ತಾಲ್ಲೂಕಿನ ತಲಾಂದದಲ್ಲಿ ಬುಧವಾರ ತಡ ರಾತ್ರಿ ಸಾರ್ವಜನಿಕ ಗಣೇಶ ವಿಸರ್ಜನೆ ಮೆರವಣಿಗೆ ಸಾಗುವ ವೇಳೆ ಮಾರ್ಗ ಮಧ್ಯೆ ಗುಳ್ಮಿಯ ಇಸ್ಮಾಯಿಲ್ ಮಸೀದಿ ಮತ್ತು ಮದರಸಾ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರಿಂದ ಬಂದ ದೂರುಗಳ ಆಧಾರದ ಮೇಲೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು(FIR) ದಾಖಲಿಸಿದ್ದಾರೆ.
ಸ್ಥಳೀಯ ನಿವಾಸಿ ಅಬ್ದುಲ್ ಆಲಿಮ್ ಅವರು ನೀಡಿದ ದೂರಿನ ಪ್ರಕಾರ, ಗುಲ್ಮಿಯ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮಿಯಾ ಮಸೀದಿ ಮತ್ತು ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ಇದರಿಂದ ಎರಡು ಕಿಟಕಿ ಗಾಜುಗಳು ಜಖಂಗೊಂಡಿವೆ.
ಇನ್ನು ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಗಣೇಶ ಮೆರವಣಿಗೆಯ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿ ಪ್ರತಿದೂರು ಕೂಡ ದಾಖಲಾಗಿದೆ. ಈ ಗಣೇಶ ಮೆರವಣಿಗೆಯು ತಲಂದಾದಿಂದ ಪ್ರಾರಂಭವಾಗಿ ಗುಲ್ಮಿ ಮೂಲಕ ವಿಸರ್ಜನಾ ಸ್ಥಳದತ್ತ ಸಾಗುತ್ತಿತ್ತು.
ಭಟ್ಕಳ ನಗರ ಪೊಲೀಸರು ಎರಡೂ ದೂರುಗಳ ಆಧಾರದ ಮೇಲೆ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಸ್ಥಳಕ್ಕೆ ಭೇಟಿ ನೀಡಿ, ಘಟನೆಗೆ ಕಾರಣರಾದವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ನಿವಾಸಿಗಳಿಗೆ ಭರವಸೆ ನೀಡಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಮಹೇಶ್ ಟೆಂಗಿನಕಾಯಿ, ಗಣಪತಿ ಹಬ್ಬದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆಯನ್ನು ಖಂಡಿಸಿದ್ದು, ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ಒತ್ತಾಯಿಸಿದ್ದಾರೆ.