ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ; ಗಣಿತ, ವಿಜ್ಞಾನಕ್ಕಿಲ್ಲ ಮೇಷ್ಟ್ರು, 96 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ..!

ವಿದ್ಯಾರ್ಥಿಗಳು, ಪೋಷಕರು ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಈ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಮಹಾಲಕ್ಷ್ಮಿಪುರಂನ ಬಸವೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 96 ವಿದ್ಯಾರ್ಥಿಗಳಿಗೆ ಗಣಿತ ಹಾಗೂ ವಿಜ್ಞಾನ ವಿಷಯ ಬೋಧಿಸಲು ಶಿಕ್ಷಕರ ಕೊರತೆ ಎದುರಾಗಿದೆ.

ಶಿಕ್ಷಕರ ಕೊರತೆಯ ನಡುವೆಯೇ ವಿದ್ಯಾರ್ಥಿಗಳನ್ನು ನಡೆಯುತ್ತಿರುವ ಮಧ್ಯಂತರ ಪರೀಕ್ಷೆಗಳಿಗೆ ಹಾಜರಾಗುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳು, ಪೋಷಕರು ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಈ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದೆ.

ಇದರ ಬೆನ್ನಲ್ಲೇ ಈ ಕುರಿತು ಪರಿಶೀಲನೆ ನಡೆಸುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಡಿಎಸ್‌ಒ ಬೆಂಗಳೂರು ಕಚೇರಿ ಕಾರ್ಯದರ್ಶಿ ಕಿರಣ್ ಕುಮಾರ್ ಮಾತನಾಡಿ, “ಶಿಕ್ಷಕರ ಕೊರತೆಯ ಜೊತೆಗೆ ಶಾಲೆಯಲ್ಲಿ ಮೂಲಸೌಕರ್ಯಕ್ಕೂ ತೀವ್ರ ಸಮಸ್ಯೆ ಇದೆ. ಕೇವಲ ಒಂದು ಶೌಚಾಲಯ ಮಾತ್ರ ಬಳಕೆಗೆ ಯೋಗ್ಯವಾಗಿದ್ದು, ಮಳೆ ಬಂದಾಗ ಶಾಲೆಯ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

File photo
5 ವರ್ಷಗಳಿಂದ ತಗಡಿನ ಶೆಡ್‌ನಲ್ಲೇ ಅಂಬೇಡ್ಕರ್ ವಸತಿ ಶಾಲೆ: 172 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದೆಯೇ ಸಮಾಜ ಕಲ್ಯಾಣ ಇಲಾಖೆ?

ಸೆಪ್ಟೆಂಬರ್ 19ರಂದು ನಿಯೋಗವು ನೆರವು ನೀಡುತ್ತಿರುವ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿತ್ತು.

ಬಳಿಕ ಸೆಪ್ಟೆಂಬರ್ 21ರಂದು ಟ್ರಸ್ಟ್‌ನ ಅಧ್ಯಕ್ಷ ಎಸ್‌.ಎಸ್‌. ದೊಡ್ಡಣ್ಣನವರ್ ಹಾಗೂ ಉಪಾಧ್ಯಕ್ಷರ ಗಮನಕ್ಕೂ ಸಮಸ್ಯೆಯನ್ನು ತರಲಾಯಿತು.

ಒತ್ತಡದ ಹಿನ್ನೆಲೆಯಲ್ಲಿ ಶಾಲಾ ಆಡಳಿತವು 9 ಮತ್ತು 10ನೇ ತರಗತಿಗಳಿಗೆ ತಕ್ಷಣವೇ ಶಿಕ್ಷಕರನ್ನು ನಿಯೋಜಿಸುವಂತೆ ಒತ್ತಾಯಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಪತ್ರ ಬರೆದಿದೆ.

ಎರಡು ದಿನಗಳೊಳಗೆ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಭರವಸೆ ನೀಡಿದ್ದಾರೆ.

ಎಲ್ಲಾ ಶಿಕ್ಷಕರ ಹುದ್ದೆಗಳು ಭರ್ತಿಯಾಗುವವರೆಗೆ, ಬಹುಕಾಲದಿಂದ ಬಾಕಿ ಉಳಿದಿರುವ ಶೌಚಾಲಯ ಮತ್ತು ಕಟ್ಟಡ ದುರಸ್ತಿ ಕಾಮಗಾರಿಗಳನ್ನು ಪೂರ್ಣಗೊಳಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಎಐಡಿಎಸ್‌ಒ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com