

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭೀಕರ ಬರ ಎದುರಾಗಿದ್ದು, ತಕ್ಷಣವೇ ಶೇ.50 ರಷ್ಟು ಮಧ್ಯಂತರ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಪ್ರಸ್ತುತ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೇರಿದೆ. ದೀರ್ಘಕಾಲದ ಮಳೆಯ ಕೊರತೆಯು ಕೃಷಿ, ನೀರಿನ ಲಭ್ಯತೆ, ಜಾನುವಾರು ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಇದರಿಂದಾಗಿ 40 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟದ ಭೀತಿ ಎದುರಾಗಿದೆ ಎಂದು ರಾಜ್ಯದಲ್ಲಿ ಹದಗೆಡುತ್ತಿರುವ ಬರ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಮುಂಬರುವ ದಿನಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಆತಂಕವಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕೇಂದ್ರ ತಂಡದ ಪರಿಶೀಲನಾ ಪ್ರಕ್ರಿಯೆಗೆ ಸಮಯ ಹಿಡಿಯುವುದರಿಂದ, ರೈತರಿಗೆ ಇನ್‌ಪುಟ್ ಸಬ್ಸಿಡಿ ಮತ್ತು ಕುಡಿಯುವ ನೀರು ಪೂರೈಕೆಗೆ ನೆರವಾಗಲು ಕೋರಿದ ಅನುದಾನದ ಶೇ.50 ರಷ್ಟು ಮಧ್ಯಂತರ ಪರಿಹಾರ ಹಾಗೂ SDRF ನ ಎರಡನೇ ಕಂತನ್ನು ಮುಂಗಡವಾಗಿ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ.