

ಬೆಂಗಳೂರು: ಬೆಂಗಳೂರಿನ ಹೊರವಲಯದ ಆನೇಕಲ್ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ, ಗುರುವಾರ ಸಿಮೆಂಟ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಹೊಂಪಲಘಟ್ಟ ಗ್ರಾಮದ ನಿವಾಸಿ ಇಂಚರಾ ಎಂದು ಗುರುತಿಸಲಾಗಿದೆ. ಇಂಚರಾ ಬಿಸಿಎ ಪದವಿ ಮಾಡುತ್ತಿದ್ದರು ಮತ್ತು ತಮ್ಮ ಸ್ಕೂಟರ್‌ನಲ್ಲಿ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಪೊಲೀಸರ ಪ್ರಕಾರ, ಇಂಚರಾ ಎಂದಿನಂತೆ ಇಂದು ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಚರಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಮತ್ತು ಸ್ನೇಹಿತರ ಆಕ್ರಂದನ ಮುಗಿಲುಮುಟ್ಟಿದೆ
ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.