

ಮಂಗಳೂರು: 2012ರಲ್ಲಿ ಅತ್ಯಾಚಾರವಾಗಿ ಕೊಲೆಯಾದ ತಮ್ಮ ಪುತ್ರಿ ಸೌಜನ್ಯ ಕೊಲೆ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT) ನೇಮಕ ಮಾಡಿರುವ ಕೆಲವು ಪೊಲೀಸ್ ಅಧಿಕಾರಿಗಳ ಬಗ್ಗೆ ಸೌಜನ್ಯಳ ತಾಯಿ ಕುಸುಮಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕುಸುಮಾವತಿ, ಎಸ್‌ಐಟಿ ರಚನೆಯಿಂದ ತಮಗೆ ತೃಪ್ತಿಯಾಗಿಲ್ಲ ಎಂದು ತಿಳಿಸಿದ್ದಾರೆ. ಆಧುನಿಕ ತನಿಖಾ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಸಮರ್ಥ ತನಿಖಾಧಿಕಾರಿಗಳನ್ನು ಒಳಗೊಂಡ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ಎಸ್‌ಐಟಿ ಮುಖ್ಯಸ್ಥರ ನೇಮಕಾತಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಡೆದಿಲ್ಲ ಎಂದು ಅವರು ಆರೋಪಿಸಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಪ್ರಕರಣದ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಚಿತಪಡಿಸಲು ಸಮರ್ಥ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಎಸ್‌ಐಟಿಗೆ ನೇಮಕಗೊಂಡಿರುವ ಕೆಲವು ಅಧಿಕಾರಿಗಳು ಈ ಪ್ರಕರಣದ ತನಿಖೆ ನಡೆಸಲು ಸೂಕ್ತರಲ್ಲ. ಎಸ್‌ಐಟಿ ರಚಿಸಿ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್‌ಗೆ ನಾವು ಕೃತಜ್ಞರಾಗಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿಯದೆ ನ್ಯಾಯಯುತ ತನಿಖೆ ನಡೆಸಲು ಸಮರ್ಥ ತನಿಖಾಧಿಕಾರಿಗಳ ತಂಡವನ್ನು ರಚಿಸಿ, ನನ್ನ ಪುತ್ರಿಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದರು.
ಕಳೆದ 14 ವರ್ಷಗಳಲ್ಲಿ ನಡೆದ ವಿವಿಧ ತನಿಖೆಗಳು ಆರೋಪಿಗಳನ್ನು ಪತ್ತೆಹಚ್ಚಲು ವಿಫಲವಾಗಿವೆ. ಕನಿಷ್ಠ ಈಗ ರಚಿಸಲಾಗಿರುವ ಹೊಸ ಎಸ್‌ಐಟಿ ಪ್ರಕರಣದ ಪಾರದರ್ಶಕ ತನಿಖೆ ನಡೆಸಬೇಕು ಎಂದು ಅವರು ಮನವಿ ಮಾಡಿದರು.
ಸಾಮಾಜಿಕ ಕಾರ್ಯಕರ್ತ ಶೇಖರ್ ಲೈಲಾ ಕೂಡ ಪತ್ರಿಕಾ ಪ್ರಕಟಣೆ ಹೊರಡಿಸಿ, ಪೊಲೀಸ್ ಅಧಿಕಾರಿಗಳಾದ ಎನ್. ಶಶಿಕುಮಾರ್ ಮತ್ತು ವೆಂಕಟೇಶ್ ಪ್ರಸನ್ನ ಅವರನ್ನು ಎಸ್‌ಐಟಿಯಿಂದ ಕೈಬಿಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಬ್ಬರೂ ಅಧಿಕಾರಿಗಳು ಭ್ರಷ್ಟಾಚಾರ ಸೇರಿದಂತೆ ಇತರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಸೌಜನ್ಯ ಸಾವು
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ, 2012ರ ಅಕ್ಟೋಬರ್ 9ರಂದು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ನಾಪತ್ತೆಯಾಗಿದ್ದಳು. ಮರುದಿನ ಧರ್ಮಸ್ಥಳದ ನೇತ್ರಾವತಿ ನದಿ ಸಮೀಪದ ಅರಣ್ಯ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಸೌಜನ್ಯಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವುದು ದೃಢಪಟ್ಟಿತ್ತು.