

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಸೆ.30ರ ಬುಧವಾರ ಹಾಗೂ ಅಕ್ಟೋಬರ್ 1ರ ಗುರುವಾರದಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 12 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನ್ನು ಘೋಷಿಸಲಾಗಿದೆ.
ಕರಾವಳಿ ಕರ್ನಾಟಕ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು- ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಗುಡುಗು- ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಎರಡು ದಿನವೂ ಗುಡುಗು ಸಹಿತ ಮಳೆಯಾಗಿದೆ. ಉತ್ತರ ಒಳನಾಡಿನ ಹಲವೆಡೆ ಒಣ ಹವೆ ಇರುವ ಸಾಧ್ಯತೆಯಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಯವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆ ಜೋರು ಮಳೆಯಾದರೆ, ಮತ್ತೆ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಈ ವೇಳೆ ಗಂಟೆಗೆ 30-40 ಕಿ. ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.