ದೆಹಲಿ ಕಾಮುಕರ ಕಾಟಕ್ಕೆ ಬಿಜೆಪಿ ನಾಯಕಿ ಕಂಗಾಲು
ನವದೆಹಲಿ: ದೆಹಲಿಯ ಕಾಮುಕರ ಕಾಟಕ್ಕೆ ಸ್ವತಃ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಾಣಿ ತ್ರಿಪಾಠಿ ಅವರೇ ಭಯ ಭೀತಗೊಂಡ ಘಟನೆ ನಡೆದಿದೆ.
ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಬಾರಿ ಕಾಮುಕರ ಕೀಟಲೆಗೆ ಸ್ವತಃ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ವಾಣಿ ತ್ರಿಪಾಠಿ ಅವರೇ ಬೆಚ್ಚಿಬಿದಿದ್ದಾರೆ. ಕೂದಲೆಳೆ ಅಂತರದಿಂದ ಪಾರಾಗಿರುವ ವಾಣಿ ಅವರು, ಇಂದು ಬೆಳ್ಳಿಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
'ದಕ್ಷಿಣ ದೆಹಲಿಯಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ ನನ್ನ ಕಾರಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ಕಾರಿನಲ್ಲಿ ಸುಮಾರು ನಾಲ್ಕೈದು ಯುವಕರು ಇದ್ದರು. ಅವರೆಲ್ಲರೂ ಮಧ್ಯದ ಅಮಲಿನಲ್ಲಿದ್ದರು. ಡಿಕ್ಕಿ ಹೊಡೆದ ನಂತರ ಕಾರಿನಲ್ಲಿದ್ದ ನನ್ನ ಕಾರಿನ ಚಾಲಕನನ್ನು ಥಳಿಸಿ ಆತನನ್ನು ಬಲವಂತದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ ಹಿಂಬದಿಯಲ್ಲಿ ಕುಳಿತಿದ್ದ ನಾನು ಕಾರಿನ ಬಾಗಿಲುಗಳನ್ನು ಲಾಕ್ ಮಾಡಿಕೊಂಡಿದ್ದೆ. ತಕ್ಷಣ 100ಕ್ಕೆ ಕರೆ ಮಾಡಿ ವಿಷಯ ತಿಳಿಸಿದೆ. ಅವರೂ ಕೂಡಲೇ ಬರುವುದಾಗಿ ಹೇಳಿದರು. ಆದರೆ ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿಯೇ ದುಷ್ಕರ್ಮಿಗಳು ಪರಾರಿಯಾದರು'.
'ಆದರೆ ರಸ್ತೆಯಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಯಾರೊಬ್ಬರೂ ತಮ್ಮ ಸಹಾಯಕ್ಕಾಗಮಿಸಲಿಲ್ಲ. ರಸ್ತೆಯಲ್ಲಿ ಸಂಚರಿಸುತ್ತಿರುವ ಇತರೆ ವಾಹನ ಸವಾರರೂ ಕೂಡ ನಮ್ಮ ಸಹಾಯಕ್ಕೆ ಬರಲಿಲ್ಲ. ದೆಹಲಿ ಸಾಮೂಹಿಕ ಅತ್ಯಾಚಾರ ನಡೆದ ಜಿಕೆ2 ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿ ಇರಲಿಲ್ಲ. ಒಂದು ವೇಳೆ ನಾನು ಕಾರಿನ ಬಾಗಿಲುಗಳನ್ನು ಲಾಕ್ ಮಾಡಿರದಿದ್ದರೆ ನನ್ನ ಗತಿ ಏನಾಗುತ್ತಿತ್ತು ಎಂದು ಊಹಿಸಿಕೊಳ್ಳಲೂ ಕಷ್ಟವಾಗುತ್ತಿದೆ' ಎಂದು ವಾಣಿ ತ್ರಿಪಾಠಿ ತಮ್ಮ ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ.
ರಾತ್ರಿ ನಡೆದ ಘಟನೆ ಕುರಿತು ವಾಣಿ ಅವರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಬಂಧಿಸುವ ಆಶ್ವಾಸನೆ ನೀಡಿದ್ದಾರೆ.
ಒಟ್ಟಾರೆ ಮಹಿಳೆಯರಿಗೆ ದೆಹಲಿಯಲ್ಲಿ ರಕ್ಷಣೆ ಇಲ್ಲ ಎಂಬುದು ಮತ್ತೆ ಸಾಬೀತಾಗಿದೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ನಡೆದ ದಕ್ಷಿಣ ದೆಹಲಿಯ ಜಿಕೆ2 ರಸ್ತೆಯ ಪಕ್ಕದ ಪ್ರದೇಶದಲ್ಲಿಯೇ ಈ ಘಟನೆ ನಡೆದಿರುವುದು ದೆಹಲಿ ಪೊಲೀಸರ ಕಾರ್ಯದಕ್ಷತೆಗೆ ಹಿಡಿದ ಕನ್ನಡಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

