ಭುಲ್ಲರ್ಗೆ ಗಲ್ಲು: ಕ್ಷಮಾದಾನಕ್ಕಾಗಿ ಪಿಎಂಗೆ ಸಿಎಂ ಮೊರೆ

ನವದೆಹಲಿ: ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಖಲಿಸ್ತಾನ ಉಗ್ರ ದೇವಿಂದರ್ ಪಾಲ್ ಸಿಂಗ್ ಭುಲ್ಲರ್ಗೆ ಕ್ಷಮಾದಾನ ನೀಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಪ್ರಧಾನಿಗಳ ಮೊರೆ ಹೋಗಿದ್ದಾರೆ.
ಸೋಮವಾರ ಬೆಳಗ್ಗೆ ನವದೆಹಲಿಯಲ್ಲಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಆಗಮಿಸಿದ್ದ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಅವರ ಪುತ್ರ ಮತ್ತು ಉಪ ಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್ ಅವರು, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ ಭುಲ್ಲರ್ಗೆ ಕ್ಷಮಾದಾನ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.
ಭುಲ್ಲರ್ಗೆ ಖಾಯಂ ಆಗಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸುವ ಕುರಿತು ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಸಿಂಗ್ ಅವರೊಂದಿಗೆ ನಡೆದ ಚರ್ಚೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಕಾಶ್ ಸಿಂಗ್ ಬಾದಲ್, 'ನಾವು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇವೆ. ಭುಲ್ಲರ್ ಪ್ರಕರಣ ಪಂಜಾಬ್ ರಾಜ್ಯದಲ್ಲಿ ಅಶಾಂತಿಗೆ ಕಾರಣವಾಗಿರುವ ಅಂಶವನ್ನು ಪ್ರಧಾನಿಗಳಿಗೆ ಮನದಟ್ಟು ಮಾಡಿದ್ದೇವೆ. ಹೀಗಾಗಿ ಭುಲ್ಲರ್ಗೆ ಕ್ಷಮೆ ನೀಡುವಂತೆ ಕೋರಿದ್ದೇವೆ ಎಂದು ಹೇಳಿದ್ದಾರೆ.
ಈಗಾಗಲೇ ಉಗ್ರ ಭುಲ್ಲರ್ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳಿಂದ ತಿರಸ್ಕಾರಗೊಂಡಿದ್ದು, ನಿನ್ನೆ ಆತನನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಆತನ ಎತ್ತರ ಮತ್ತು ತೂಕದ ಪ್ರಮಾಣವನ್ನು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ ಭುಲ್ಲರ್ನ ಜೈಲು ಕೊಠಡಿಯನ್ನು ಬದಲಿಸಲಾಗಿದ್ದು, ರಹಸ್ಯ ಕೊಠಡಿಗೆ ಅವರನ್ನು ರವಾನಿಸಲಾಗಿದೆ ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ.
1993ರಲ್ಲಿ ದೆಹಲಿಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಲಿಸ್ತಾನ ಉಗ್ರ ದೇವಿಂದರ್ ಸಿಂಗ್ ಭುಲ್ಲರ್ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಬಾಂಬ್ ಸ್ಫೋಟದಲ್ಲಿ 9 ಮಂದಿ ಮೃತರಾಗಿ, ದೆಹಲಿ ಯುವ ಕಾಂಗ್ರೆಸ್ ಘಟಕದ ಮುಖ್ಯಸ್ಥ ಎಂ.ಎಸ್ ಬಿಟ್ಟಾ ಅವರು ಸೇರಿದಂತೆ 25 ಮಂದಿ ಗಾಯಗೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ನ್ಯಾಯಾಲಯ 2001ರಲ್ಲಿ ಭುಲ್ಲರ್ಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2002ರಲ್ಲಿ ಹೈಕೋರ್ಟ್ ದೆಹಲಿ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಭುಲ್ಲರ್ ಪರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ 2002ರಲ್ಲಿ ಮೇಲ್ಮನವಿ ಅರ್ಜಿಯನ್ನು ತಳ್ಳಿ ಹಾಕಿದ ನಂತರ 2003ರಲ್ಲಿ ರಾಷ್ಟ್ರಪತಿಗಳ ಬಳಿ ಕ್ಷಮಾದಾನಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. 2011ರಲ್ಲಿ ಭುಲ್ಲರ್ ಕ್ಷಮಾದಾನ ಅರ್ಜಿ ತಿರಸ್ಕಾರಗೊಂಡಿತ್ತು. ಆದರೆ ಕ್ಷಮಾದಾನ ಅರ್ಜಿ ವಿಲೇವಾರಿಗೆ ವಿಳಂಬವಾದ ಹಿನ್ನಲೆಯಲ್ಲಿ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಬದಲಿಸಬೇಕು ಎಂದು ಭುಲ್ಲರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಕಳೆದ ಶುಕ್ರವಾರ ವಜಾಗೊಳಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾ.ಜಿ.ಎಸ್.ಸಿಂಘ್ವಿ ಮತ್ತು ಎಸ್.ಜೆ.ಮುಖ್ಯೋಪಧ್ಯಾಯ ಅವರ ಪೀಠ, ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ಉಂಟಾದ ವಿಳಂಬ ಕಾರಣವನ್ನು ಮುಂದಿಟ್ಟುಕೊಂಡು ಭಯೋತ್ಪಾದನೆ ಮತ್ತು ಸಾಮೂಹಿಕ ಕಗ್ಗೊಲೆಯಂತಹ ಕೃತ್ಯಗಳಲ್ಲಿ ಪಾಲ್ಗೊಂಡವರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸುವುದು ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


